×
Ad

ಯೋಗ್ಯ ವ್ಯಕ್ತಿಯ ಆಯ್ಕೆಗಾಗಿ ಮತಚಲಾಯಿಸಿ: ಬೀಳಗಿ

Update: 2017-01-25 18:24 IST

ಮಂಗಳೂರು, ಜ.25: ಮತದಾರರು ಯಾವುದೇ ಒತ್ತಡ ಅಥವಾ ಪ್ರಲೋಭಕ್ಕೆ ಒಳಗಾಗದೆ ದೇಶದ ಹಿತದೃಷ್ಟಿಯಿಂದ ಮತ ಚಲಾಯಿಸಿ ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕೆ.ಎಸ್.ಬಿಳಗಿ ಸಲಹೆ ನೀಡಿದ್ದಾರೆ.

ದ.ಕ.ಜಿಲ್ಲಾಡಳಿತ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಬುಧವಾರ ನಗರದ ಪುರಭವನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

 ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯಬಾರದು. ಯೋಗ್ಯ ವ್ಯಕ್ತಿಗೆ ಮತ ನೀಡುವ ಮೂಲಕ ಭವ್ಯ ಭಾರತ ಕಟ್ಟುವಲ್ಲಿ ಯುವ ಜನಾಂಗ ದಿಟ್ಟ ಹೆಜ್ಜೆಯನ್ನಿಡಬೇಕು. ರಾಷ್ಟ್ರದ ಅಭಿವೃದ್ಧಿಯೇ ನಮ್ಮ ಗುರಿಯಾಗಬೇಕು ಎಂದು ಬಿಳಗಿ ಹೇಳಿದರು.
ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್.ರವಿ ಮಾತನಾಡಿ, ಸಂವಿಧಾನದತ್ತವಾಗಿ ಲಭಿಸಿರುವ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಮತದಾನ ನಮ್ಮ ಕರ್ತವ್ಯ ಎಂದು ಭಾವಿಸಿ ಪ್ರತಿಯೊಬ್ಬರೂ ಮತದಾನದಲ್ಲಿ ಪಾಲ್ಗೊಳ್ಳಬೇಕೆಂದರು.

ಅವಿದ್ಯಾವಂತರಿಗಿಂತ ವಿದ್ಯಾವಂತರೆ ಮತದಾನದಿಂದ ದೂರ ಉಳಿಯುತ್ತಿದ್ದಾರೆ. ತನ್ನ ಒಂದು ಮತ ಚಲಾಯಿಸದಿದ್ದರೆ ಏನೂ ಆಗದು ಎಂಬ ಸಿನಿಕತನದಿಂದ ಹೊರಬರಬೇಕು. ದೇಶದ ಅಭಿವೃದ್ಧಿಗಾಗಿ ನಾವು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ದ.ಕ.ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್, ಎಲ್ಲರೂ ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳಬೇಕು. ಮತ ಚಲಾಯಿಸುವ ಸಂದರ್ಭದಲ್ಲಿ ಜಾತಿ, ಧರ್ಮ, ಜನಾಂಗ, ಭಾಷೆಗಳನ್ನು ನೋಡದೆ ಸರಿಯಾದ ನಿರ್ಧಾರವನ್ನು ಕೈಗೊಂಡು ಯೋಗ್ಯ ವ್ಯಕ್ತಿಯನ್ನು ಆರಿಸುವಂತಾಗಬೇಕು ಎಂದರು.
ಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್, ಹಿರಿಯ ಸಿವಿಲ್ ನ್ಯಾಯಾಧೀಶ ಮಲ್ಲನಗೌಡ, ರಥಬೀದಿ ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ರಾಜಶೇಖರ ಎಚ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಪರ ಜಿಲ್ಲಾಧಿಕಾರಿ ಕುಮಾರ್ ಸ್ವಾಗತಿಸಿ, ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News