ಧಾರ್ಮಿಕ ಕಾರ್ಯಕ್ರಮದಲ್ಲಿ ಅನ್ಯಧರ್ಮೀಯ ಗ್ರಾಪಂ ಅಧ್ಯಕ್ಷರ ಉಪಸ್ಥಿತಿಗೆ ಅಡ್ಡಿ
ಬೆಳ್ತಂಗಡಿ, ಜ.31: ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಅನ್ಯ ಧರ್ಮೀಯ ಎಂಬ ಕಾರಣಕ್ಕೆ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರ ಭಾಗವಹಿಸುವಿಕೆಯನ್ನು ವಿರೋಧಿಸಿ ಬಿಜೆಪಿ ಹಾಗೂ ಸಂಘ ಪರಿವಾರ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ.
ಇಲ್ಲಿನ ಸೌತಡ್ಕ ಮಹಾಗಣಪತಿ ದೇವಳದಲ್ಲಿ ಪೂಜಾ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಶಾಸಕ ಕೆ.ವಸಂತ ಬಂಗೇರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಕೊಕ್ಕಡ ಗ್ರಾಪಂ ಅಧ್ಯಕ್ಷ ಸೆಬಾಸ್ಟಿಯನ್ ಅವರನ್ನು ಆಹ್ವಾನಿಸಲಾಗಿತ್ತು. ಅದರಂತೆ ಅವರು ಭಾಗವಹಿಸಿದ್ದರು. ಆದರೆ ದೇವಳದ ಕಾರ್ಯಕ್ರಮಕ್ಕೆ ಅನ್ಯ ಧರ್ಮೀಯರನ್ನು ಆಹ್ವಾನಿಸಿದ್ದನ್ನು ವಿರೋಧಿಸಿ ಬಿಜೆಪಿ ಮುಖಂಡ ರಂಜನ್ ಗೌಡ, ಹರೀಶ್ ಪೂಂಜಾ, ಶಶಿಧರ್ ಕಲ್ಮಂಜ ಹಾಗೂ ಇತರರ ನೇತೃತ್ವದಲ್ಲಿ ಕಾರ್ಯಕ್ರಮ ಸ್ಥಳದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ಸಭಾ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿದರು. ಅಷ್ಟರಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದುಕೊಂಡು ಬಳಿಕ ಬಿಡುಗಡೆಗೊಳಿಸಿದರು.
ಈ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ಮಾತ್ರವಲ್ಲ ಸರಕಾರದ ವತಿಯಿಂದ ಹಲವಾರು ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಕೂಡಾ ಹಮ್ಮಿಕೊಳ್ಳಲಾಗಿತ್ತು ಎಂದು ತಿಳಿದುಬಂದಿದೆ.