×
Ad

ಆಟೊ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ: ಮೂವರ ಬಂಧನ

Update: 2017-01-31 23:03 IST

ಶಿವಮೊಗ್ಗ, ಜ. 31: ಆಟೊ ಚಾಲಕನೋರ್ವನ ಮೇಲೆ ಗುಂಪೊಂದು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ, ಆಟೊ ಜಖಂಗೊಳಿಸಿರುವ ಘಟನೆ ಶಿವಮೊಗ್ಗ ನಗರದ ಸೂಳೇಬೈಲು ಬಡಾವಣೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ದೇವೇಂದ್ರಪ್ಪ(45) ಹಲ್ಲೆಗೊಳಗಾದ ಆಟೊ ಚಾಲಕ ಎಂದು ಗುರುತಿಸಲಾಗಿದೆ. ಇವರನ್ನು ಸರಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಡೆಯುತ್ತಿದ್ದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಅದೇ ಬಡಾವಣೆಯ ನಿವಾಸಿಗಳಾದ ಮುನಾವರ್ ಬಾಬು 25), ದಾದಾಪೀರ್(22) ಹಾಗೂ ಮುನೀರ್(23) ಎಂಬವರನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಇತರರ ಬಂಧನಕ್ಕೆ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ, ಡಿವೈಎಸ್ಪಿ ಮಂಜುನಾಥ್ ಶೆಟ್ಟಿ, ಇನ್‌ಸ್ಪೆಕ್ಟರ್ ಗಂಗಾಧರಪ್ಪ, ಸಬ್ ಇನ್‌ಸ್ಪೆಕ್ಟರ್ ಗಿರೀಶ್ ಮತ್ತವರ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News