ಬುರ್ಖಾ ವಿವಾದವೆಬ್ಬಿಸಿ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದ ಎಬಿವಿಪಿ
ಶಿವಮೊಗ್ಗ, ಫೆ. 4 : ಬುರ್ಖಾ ಧರಿಸುವಿಕೆಗೆ ಸಂಬಂಧಿಸಿದಂತೆ ನಗರದ ಸಹ್ಯಾದ್ರಿ ಕಾಲೇಜ್ ನಲ್ಲಿ ಎಬಿವಿಪಿ ಕಾರ್ಯಕರ್ತರು ಹಾಗೂ ಹೊರಗಿನ ಶಕ್ತಿಗಳು ವಿದ್ಯಾರ್ಥಿನಿಯರ ಮೇಲೆ ದೈಹಿಕ ಹಲ್ಲೆ ನಡೆಸಿದ್ದು , ಹಲ್ಲೆಕೋರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯು ಜಿಲ್ಲಾಡಳಿತವನ್ನು ಆಗ್ರಹಿಸಿದೆ.
ಈ ಸಂಬಂಧ ಸಂಘಟನೆಯ ಕಾರ್ಯಕರ್ತರು ಶನಿವಾರ ಸಂಜೆ ನಗರದ ಡಿ.ಸಿ. ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಪತ್ರ ಅರ್ಪಿಸಿದರು.
ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ರಾಜ್ಯದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಯಾವುದೇ ಸ್ಪಷ್ಟ ನೀತಿ ನಿಯಮ ರಚಿಸಿಲ್ಲ. ವಸ್ತ್ರಧಾರಣೆ ಓರ್ವ ನಾಗರಿಕನಿಗೆ ಸಂವಿಧಾನ ನೀಡಿದ ಮೂಲಭೂತ ಹಕ್ಕಾಗಿದೆ. ಹಾಗೆಯೇ ವಿಶ್ವವಿದ್ಯಾಲಯಯಗಳಲ್ಲಿ ವಸ್ತ್ರಧಾರಣೆಯ ನೀತಿ-ನಿಯಮ ರೂಪಿಸುವುದು ಸಂವಿಧಾನಕ್ಕೆ ವಿರುದ್ದವಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್‌ನಲ್ಲಿ ಈ ಹಿಂದೆ ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಯಾವುದೇ ತಗಾದೆಯಿರಲಿಲ್ಲ. ಆದರೆ ಇದ್ದಕ್ಕಿದ್ದಂತೆ ಕಾಲೇಜ್ ನ ಎಬಿವಿಪಿ ಸಂಘಟನೆಯ ಕಾರ್ಯಕರ್ತರು ಹಾಗೂ ಹೊರಗಿನ ಶಕ್ತಿಗಳು ಕ್ಯಾಂಪಸ್ ಒಳಗೆ ನುಗ್ಗಿ ವಿದ್ಯಾರ್ಥಿನಿಯರನ್ನು ಎಳೆದಾಡಿ ಹಲ್ಲೆ ನಡೆಸಿದ್ದಾರೆ. ಇದು ವಿದ್ಯಾರ್ಥಿನಿಯರು ಹಾಗೂ ಪೋಷಕರಲ್ಲಿ ಆತಂಕ ಉಂಟು ಮಾಡಿದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ವಸ್ತ್ರ ಸಂಹಿತೆ ಮುಂದಿಟ್ಟುಕೊಂಡು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿರುವುದು ಇದೇ ಮೊದಲಲ್ಲವಾಗಿದೆ. ಮಡಿಕೇರಿ, ಹಾವೇರಿ, ಮಂಗಳೂರು ಮೊದಲಾದೆಡೆಯು ಎಬಿವಿಪಿ ಹಾಗೂ ಹೊರಗಿನ ಶಕ್ತಿಗಳು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿವೆ. ಇದೆಲ್ಲವನ್ನೂ ಗಮನಿಸಿದರೆ ಈ ಎಲ್ಲ ಕೃತ್ಯಗಳು ಪೂರ್ವಯೋಜಿತ ಎಂಬುವುದು ಗೊತ್ತಾಗುತ್ತದೆ ಎಂದು ಪ್ರತಿಭಟನಾಕಾರರು ಆಪಾದಿಸಿದ್ದಾರೆ.
ಈಗಾಗಲೇ ಉನ್ನತ ಶಿಕ್ಷಣ ಸಚಿವರು ವಸ್ತ್ರ ಸಂಹಿತೆ ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕುವೆಂಪು ವಿಶ್ವವಿದ್ಯಾಲಯ ಕುಲ ಸಚಿವರು ಕೂಡ ವಿವಿ ವ್ಯಾಪ್ತಿಯ ಕಾಲೇಜ್‌ಗಳಲ್ಲಿ ವಸ್ತ್ರ ಸಂಹಿತೆ ಕಡ್ಡಾಯ ಮಾಡಿಲ್ಲ ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ವಸ್ತ್ರ ಸಂಹಿತೆ ನೆಪ ಮಾಡಿಕೊಂಡು ಸಹ್ಯಾದ್ರಿ ಕಾಲೇಜ್ ನಲ್ಲಿ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿ ಭಯದ ವಾತಾವರಣ ಸೃಷ್ಟಿಸಿದ ಎಬಿವಿಪಿ ಹಾಗೂ ಹೊರಗಿನ ಶಕ್ತಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು. ಆರೋಪಿಗಳನ್ನು ಬಂಧಿಸಬೇಕು. ಶಾಲಾ-ಕಾಲೇಜ್ ಗಳಲ್ಲಿ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ನೀಡಬೇಕು. ವಿದ್ಯಾರ್ಥಿಗಳಲ್ಲಿ ಸಂಘರ್ಷ ಉಂಟು ಮಾಡುತ್ತಿರುವ ಬಾಹ್ಯ ಶಕ್ತಿಗಳನ್ನು ಪತ್ತೆ ಹಚ್ಚಿ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಪ್ರತಿಭಟನೆಯ ನೇತೃತ್ವವನ್ನು ಸಂಘಟನೆಯ ಜಿಲ್ಲಾಧ್ಯಕ್ಷ ಮಹಮ್ಮದ್ ಆರೀಫ್ ವಹಿಸಿದ್ದರು.