ಥಾಣೆ ಬಿಜೆಪಿ ಘಟಕ: 20 ಪದಾಧಿಕಾರಿಗಳ ರಾಜೀನಾಮೆ
ಥಾಣೆ, ಫೆ.5: ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನಿರಾಕರಿಸಿರುವುದು ಮತ್ತು ಪಕ್ಷದ ಮುಖಂಡರು ಕಾರ್ಯಕರ್ತರ ಬಗ್ಗೆ ನಿರ್ಲಕ್ಷದ ಧೋರಣೆ ತೋರುತ್ತಿರುವುದನ್ನು ವಿರೋಧಿಸಿ ಬಿಜೆಪಿಯ ಥಾಣೆ ಘಟಕ ಸಮಿತಿಯ 20 ಮಂದಿ ಪದಾಧಿಕಾರಿಗಳು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಫೆ.21ರಂದು ಥಾಣೆ ನಗರಪಾಲಿಕೆಗೆ ಚುನಾವಣೆ ನಡೆಯಲಿದೆ. ಇದರಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವಾಗ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ. ಶೇ.80ರಷ್ಟು ಟಿಕೇಟುಗಳನ್ನು ಇತ್ತೀಚೆಗಷ್ಟೇ ಪಕ್ಷ ಸೇರಿರುವರಿಗೆ ನೀಡಲಾಗಿದೆ.
ನಗರದಲ್ಲಿ ಪಕ್ಷದ ಬೆಳವಣಿಗೆಗೆ ಶ್ರಮಿಸಿದ ಕಾರ್ಯಕರ್ತರಿಗೆ ಬೆಲೆಯೇ ಇಲ್ಲದಂತಾಗಿದೆ . ನಿಷ್ಠಾವಂತ ಕಾರ್ಯಕರ್ತರಿಗೆ ಮಾತ್ರ ಟಿಕೆಟ್ ನೀಡಲಾಗುತ್ತದೆ ಮತ್ತು ಟಿಕೆಟ್ ಹಂಚಿಕೆಯ ವೇಳೆ ಪಾರದರ್ಶಕತೆ ಕಾಯ್ದುಕೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಆದರೆ ಈ ಹೇಳಿಕೆಗೆ ಬೆಲೆಯೇ ಇಲ್ಲದಂತಾಗಿದೆ ಎಂದು ಅವರು ಸುದ್ದಿಗೋಷ್ಠಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುದ್ದೆಗೆ ರಾಜೀನಾಮೆ ನೀಡಿದ್ದರೂ ಪಕ್ಷ ಬಿಟ್ಟು ಹೋಗುವುದಿಲ್ಲ. ಪಕ್ಷ ನಿರ್ಧರಿಸಿರುವ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಬೇಕೇ ಎನ್ನುವ ಬಗ್ಗೆ ಇನ್ನಷ್ಟೇ ನಿರ್ಧರಿಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಥಾಣೆ ನಗರಪಾಲಿಕೆ ಮಾಜಿ ಉಪಮೇಯರ್ ಸುಭಾಷ್ ಕಾಳೆ, ಬಿಜೆಪಿ ಥಾಣೆ ಘಟಕದ ಕಾರ್ಯದರ್ಶಿ ಶಶಿ ಯಾದವ್, ಥಾಣೆ ಜಿಲ್ಲಾ ಮಹಿಳಾ ಮೋರ್ಛಾದ ಪ್ರಧಾನ ಕಾರ್ಯದರ್ಶಿ ದೀಪ್ತಿ ಚಾಂದ್‌ಗಡ್ಕರ್, ತೃಪ್ತಿ ಜೋಷಿ ಪಾಟೀಲ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.