×
Ad

ಜಿಲ್ಲೆಯಲ್ಲಿ ಬಾಲಕಾರ್ಮಿಕರ ಸಮೀಕ್ಷೆ: ಜಿಲ್ಲಾಧಿಕಾರಿ

Update: 2017-02-10 20:14 IST

ಉಡುಪಿ, ಫೆ.10: ಜಿಲ್ಲೆಯಲ್ಲಿ ಬಾಲ ಕಾರ್ಮಿಕರ ಮತ್ತು ಕಿಶೋರಾವಸ್ಥೆಯ ಕಾರ್ಮಿಕರ ಸಮೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದ್ದಾರೆ.

ಶುಕ್ರವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿರುವ ವಿವಿಧ ಕಾಲೇಜುಗಳ ಎಂಎಸ್‌ಡಬ್ಲ್ಯೂ ವಿದ್ಯಾರ್ಥಿಗಳ ಸಹಕಾರದೊಂದಿಗೆ ವಿವಿದೆಡೆ ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಾಲ ಕಾರ್ಮಿಕರ ಮತ್ತು ಕಿಶೋರಾವಸ್ಥೆಯ ಕಾರ್ಮಿಕರ ಸಮೀಕ್ಷೆ ನಡೆಸುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಚೈಲ್ಡ್ ಹೆಲ್ಪ್‌ಲೈನ್ ಪ್ರಾರಂಭಿಸುವ ಕುರಿತಂತೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿದರು.

ಜಿಲ್ಲೆಯ ಅಪಾರ್ಟ್‌ಮೆಂಟ್‌ಗಳಲ್ಲಿ ಬಾಲ ಕಾರ್ಮಿಕರು ಇರುವ ಸಾಧ್ಯತೆ ಗಳಿದ್ದು, ಬಾಲ ಕಾರ್ಮಿಕರ ಬಳಕೆ ನಿಷೇಧ ಕುರಿತು ಇರುವ ಕಾಯಿದೆ ಬಗ್ಗೆ ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಅರಿವು ಮೂಡಿಸುವಂತೆ ಹಾಗೂ ಕಾಯಿದೆ ಬಗ್ಗೆ ಭಿತ್ತಿಪತ್ರಗಳನ್ನು ಹಂಚುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

 ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಬಾಲ ಕಾರ್ಮಿಕರ ಕುರಿತು ಅರಿವು ಮೂಡಿಸುವ ಭಿತ್ತಿಪತ್ರಗಳನ್ನು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸುವುದರ ಮೂಲಕ ಅರಿವು ಕಾರ್ಯಕ್ರಮ ಏರ್ಪಡಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಪಿ.ವಿಶ್ವನಾಥ್, ವಿವಿಧ ಇಲಾಖೆ ಗಳ ಅಧಿಕಾರಿಗಳು ಹಾಗೂ ಸ್ವಯಂಸೇವಾ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News