ಬಂಟ್ವಾಳ: ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ
ಬಂಟ್ವಾಳ, ಫೆ. 11: ಪುರಸಭಾ ವ್ಯಾಪ್ತಿಯ ಹಲವು ರಸ್ತೆಗಳ ಅಭಿವೃದ್ಧಿ ಹಾಗೂ ನಿವೇಶನ ರಹಿತರಿಗೆ ನಿವೇಶನವನ್ನು ಒದಗಿಸಿ ಕೊಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಿಗೆ ಶನಿವಾರ ಪುರಸಭೆಯ ಸಭಾಂಗಣದಲ್ಲಿ ಸಾಂಕೇತಿಕವಾಗಿ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಂಟ್ವಾಳ ಪುರಸಭಾ 2016-17ನೆ ಸಾಲಿನ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಒಟ್ಟು 60 ಮಂದಿ ಫಲಾನುಭವಿಗಳು ಆಯ್ಕೆಯಾಗಿದ್ದಾರೆ. ಅವರಿಗೆ ತಲಾ 2.7 ಲಕ್ಷ ರೂ. ಮಂಜೂರಾತಿಯಾಗಿರುತ್ತದೆ ಎಂದು ಅವರು ಹೇಳಿದರು.
ನಗರೋತ್ಥಾನ ಯೋಜನೆಯಡಿ ಬಂಟ್ವಾಳ ಪುರಸಭೆಗೆ 9 ಕೋಟಿ ರೂಪಾಯಿಗಳು ಮಂಜೂರಾಗಿದ್ದು, ಎರಡು ತಿಂಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಬಳಸಾಗುವುದು. ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ಪೈಪ್ ಕಾಮಗಾರಿ ಸಂದರ್ಭದಲ್ಲಿ ಹಾಳಾಗಿರುವ ರಸ್ತೆಗಳನ್ನು ಕೂಡಲೇ ದುರಸ್ಥಿಗೊಳಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ಹೇಳಿದರು.
ಈ ಸಂದರ್ಭದಲ್ಲಿ ಪುರಸಭಾ ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ಪಿಯುಸ್ ಎಲ್. ರೋಡ್ರಿಗಸ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಆಶ್ರಯ ಸಮಿತಿ ಸದಸ್ಯ ಖಾಸಿಂ ಹಾಗೂ ಪುರಸಭಾ ಸದಸ್ಯರು ಉಪಸ್ಥಿತರಿದ್ದರು. ಮುಖ್ಯಾಧಿಕಾರಿ ಕೆ.ಸುಧಾಕರ್ ಸ್ವಾಗತಿಸಿದರು. ಆಶ್ರಯ ಸಮಿತಿ ಸದಸ್ಯ ಸಂಜೀವ ಬಂಜನ್ ವಂದಿಸಿದರು.