ಮಕ್ಕಳ ಪಾಲನಾ ಸಂಸ್ಥೆಗಳ ನೊಂದಣಿಗೆ ಸೂಚನೆ
ಉಡುಪಿ, ಫೆ.14: ಸರ್ವೋಚ್ಚ ನ್ಯಾಯಾಲಯವು ಬಚ್‌ಪನ್ ಬಚಾವೋ ಆಂದೋಲನದ ಅಂಗವಾಗಿ ಸಲ್ಲಿಸಿದ ರಿಟ್ ಅರ್ಜಿಗೆ ಸಂಬಂಧಪಟ್ಟಂತೆ ನೀಡಿರುವ ನಿರ್ದೇಶನದಂತೆ ಮಕ್ಕಳಿಗೆ ರಕ್ಷಣೆ ಕೊಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳು, ಮಕ್ಕಳ ಕಲ್ಯಾಣ ಸಮಿತಿಯ ಮುಖಾಂತರ ಮಾತ್ರ ಮಕ್ಕಳನ್ನು ರಕ್ಷಣೆಗೆ ದಾಖಲು ಮಾಡಬೇಕಿದ್ದು ನೇರವಾಗಿ ಪಡೆಯಲು ಅರ್ಹತೆ ಇಲ್ಲವೆಂದು ಸ್ಪಷ್ಟ ಪಡಿಸಿದೆ.
ಇದರೊಂದಿಗೆ ಪಾಲನೆ ಮತ್ತು ರಕ್ಷಣೆ ಅವಶ್ಯವಿರುವ ಮಕ್ಕಳಿಗೆ ಸ್ವಯಂಸೇವಾ ಸಂಸ್ಥೆಗಳು ನಡೆಸುತ್ತಿರುವ ಅನಾಥಾಲಯಗಳು, ಅಶ್ರಯಧಾಮಗಳು, ತೆರೆದ ತಂಗುದಾಣಗಳು, ನಿರ್ಗತಿಕ ಮಕ್ಕಳ ಕುಟೀರ, ಬಾಲಕಾರ್ಮಿಕರಿಗಾಗಿ ನಡೆಸುತ್ತಿರುವ ಬ್ರಿಡ್ಜ್‌ಶಾಲೆಗಳು, ವಿಶೇಷ ದತ್ತು ಕೇಂದ್ರಗಳು, ಉಜ್ವಲ ಕೇಂದ್ರ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಮಾನ್ಯತೆ ಪಡೆದ ವಸತಿಯುತ ಸಂಸ್ಥೆಗಳು, ಅರ್ಹ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳ ವಸತಿ ಶಾಲೆಗಳನ್ನು ಹೊರತು ಪಡಿಸಿ ಎಲ್ಲಾ ರೀತಿಯ ಮಕ್ಕಳ ಪಾಲನಾ ಸಂಸ್ಥೆಗಳನ್ನು ಬಾಲನ್ಯಾಯ ಕಾಯ್ದೆ 2000 ಅಡಿಯಲ್ಲಿ ಕಡ್ಡಾಯವಾಗಿ ನೊಂದಣಿಯಾಗಿ ಕಾರ್ಯನಿರ್ವಹಿಸಬೇಕೆಂದು ಸ್ಪಷ್ಟವಾಗಿ ನಿರ್ದೇಶನ ನೀಡಿದೆ.
ಈ ಹಿನ್ನಲೆಯಲ್ಲಿ ಬಾಲನ್ಯಾಯ (ಪಾಲನೆ ಮತ್ತು ರಕ್ಷಣೆ) ಕಾಯ್ದೆಯಡಿ 2015ರಡಿ ಇದುವರೆಗೂ ನೋಂದಾವಣಿ ಮಾಡಿಸಿಕೊಳ್ಳದಿರುವ ಸರಕಾರೇತರ ಸ್ವಯಂಸೇವಾ ಸಂಸ್ಥೆಗಳು ಈ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯನ್ನು ಸಂಪರ್ಕಿಸಿ ನಿಗದಿತ ನಮೂನೆಯನ್ನು ಪಡೆದು ಪ್ರಸ್ತಾವನೆಯನ್ನು ಸಲ್ಲಿಸಬೇಕು.
ಈವರೆಗೆ ನೊಂದಾವಣೆಯಾಗದೇ ಇರುವ ಸಂಸ್ಥೆಗಳನ್ನು ಮಾ.21ರೊಳಗೆ ನೊಂದಾಯಿಸುವಂತೆ, ಅನಂತರವೂ ನೊಂದಾವಣಿಯಾಗದ ಸಂಸ್ಥೆಗಳ ವಿರುದ್ದ ಬಾಲನ್ಯಾಯ (ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015 ಸೆಕ್ಷನ್ 42(1) ರನ್ವಯ ಒಂದು ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂ. ದಂಡ ಅಥವಾ ಎರಡೂ ಶಿಕ್ಷೆ ವಿಧಿಸಲು ಅವಕಾಶವಿದೆ. ಅಲ್ಲದೇ ಅದರ ನೊಂದಣಿಯನ್ನು ಹಿಂಪಡೆಯಲು ಅಥವಾ ರದ್ದು ಪಡಿಸಲು ಕ್ರಮ ಜರುಗಿಸಲಾಗುವುದು. ಒಂದು ವೇಳೆ ಇಂಥ ಸಂಸ್ಥೆಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆದಲ್ಲಿ ಹಾಗೂ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದಲ್ಲಿ ಸಂಸ್ಥೆಯ ಮುಖ್ಯಸ್ಥರನ್ನು ನೇರವಾಗಿ ಹೊಣೆಗಾರರಾಗಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಾರ್ವಜನಿಕರು ತಮ್ಮ ಆಸುಪಾಸಿನಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳಿದ್ದಲ್ಲಿ ಇದರ ಮಾಹಿತಿಯನ್ನು ವಿಳಾಸದೊಂದಿಗೆ ಕೂಡಲೇ ಹತ್ತಿರದ ಪೊಲೀಸ್ ಠಾಣೆ/ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ /ಉಪನಿರ್ದೇಶಕರು, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ/ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು/ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ತಿಳಿಸಲು ಮನವಿ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾಮಕ್ಕಳ ರಕ್ಷಣಾ ಘಟಕ, ಬಿ ಬ್ಲಾಕ್, ಮೊದಲ ಮಹಡಿ, ರಜತಾದ್ರಿ, ಮಣಿಪಾಲ ಉಡುಪಿ ಜಿಲ್ಲೆ (ದೂರವಾಣಿ:0820-2574964) ಇವರನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.