×
Ad

ದಿಡ್ಡಳ್ಳಿ ಗಿರಿಜನರಿಗೆ ಮನೆ ನಿರ್ಮಾಣಕ್ಕೆ ಅಗತ್ಯ ಕ್ರಮ: ಜಿಲ್ಲಾಧಿಕಾರಿ ಡಾ. ಡಿಸೋಜ ಭರವಸೆ

Update: 2017-02-15 22:56 IST

ಮಡಿಕೇರಿ, ಫೆ.15 : ದಿಡ್ಡಳ್ಳಿಯ 528 ನಿರಾಶ್ರಿತ ಗಿರಿಜನ ಕುಟುಂಬಗಳಿಗೆ ಈಗಾಗಲೇ ಲಾಟರಿ ಮೂಲಕ ನಿವೇಶನ ಹಂಚಿಕೆ ಮಾಡಲಾಗಿದ್ದು, ಈ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿ, ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದಿಂದ ಮನೆ ನಿರ್ಮಾಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಪುನರ್ವಸತಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಮಿತಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಈಗಾಗಲೇ ಬಸವನಹಳ್ಳಿಯಲ್ಲಿ 181, ರಾಂಪುರ 171 ಹಾಗೂ ಕೆದಮುಳ್ಳೂರು ವ್ಯಾಪ್ತಿಯಲ್ಲಿ 176 ಒಟ್ಟು 528 ಕುಟುಂಬಗಳಿಗೆ ಲಾಟರಿ ಮೂಲಕ ನಿವೇಶನ ಹಂಚಿಕೆ ಮಾಡಲಾಗಿದೆ.

ಈ ಸಂಬಂಧ ಬಡಾವಣೆ ನಿರ್ಮಾಣ ಮಾಡಿ, ಮನೆ ನಿರ್ಮಾಣಕ್ಕೆ ಪ್ರಥಮಾದ್ಯತೆ ಮೇಲೆ ಕ್ರಮಕೈಗೊಳ್ಳಲು ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಐಟಿಡಿಪಿ ಇಲಾಖೆ ಅಧಿಕಾರಿಗೆ ನಿರ್ದೇಶನ ನೀಡಿದರು. ಇಲ್ಲಿನ ಗಿರಿಜನರಿಗೆ ಪುನರ್ವಸತಿ ಕಲ್ಪಿಸುವುದರ ಜೊತೆಗೆ ಸ್ವಯಂ ಉದ್ಯೋಗ ಕಲ್ಪಿಸಲು ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ. ಅಲ್ಲದೆ, ವಿವಿಧ ಇಲಾಖೆಗಳಿಂದ ಗಿರಿಜನರಿಗೆ ದೊರೆಯುವ ಸೌಲಭ್ಯಗಳನ್ನು ತಲುಪಿಸುವುದು ಮತ್ತಿತರ ಮಹತ್ವದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಮೂಲ ನಿವಾಸಿ ಗಿರಿಜನ ಮಕ್ಕಳಿಗೆ ಶಿಕ್ಷಣ ನೀಡಬೇಕಿದೆ. ಮಕ್ಕಳು ಶಿಕ್ಷಣ ಪಡೆದಾಗ ಮುಖ್ಯವಾಹಿನಿಗೆ ಬರಲು ಸಾಧ್ಯ. ಆ ನಿಟ್ಟಿನಲ್ಲಿ ನೂತನ ಬಡಾವಣೆಯಲ್ಲಿ ಅಂಗನವಾಡಿ, ಶಾಲೆ ತೆರೆಯಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.ಗಿರಿಜನರಲ್ಲಿ ಅಭಿವೃದ್ಧಿ ಕಾಣಬೇಕಾದರೆ ಅವರನ್ನು ಮುಖ್ಯವಾಹಿನಿಗೆ ತರಬೇಕಿದೆ.

ಆ ನಿಟ್ಟಿನಲ್ಲಿ ವಸತಿ ಜೊತೆಗೆ ಮೂಲಭೂತ ಸೌಕರ್ಯ, ಶಿಕ್ಷಣದ ಸೌಲಭ್ಯ ಮತ್ತು ಅವರಲ್ಲಿ ಕೌಶಲ್ಯ ಅಭಿವೃದ್ಧಿ ಮಾಡುವುದು ಅಗತ್ಯವಾಗಿದ್ದು, ಆ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಲು ಕಾರ್ಯಕ್ರಮ ರೂಪಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಜಿ.ಪಂ.ಸಿಇಒ ಚಾರುಲತಾ ಸೋಮಲ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಾಶ್ ಉಪವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಜಿ.ಪಂ.ಯೋಜನಾ ನಿರ್ದೇಶಕ ಸಿದ್ದಲಿಂಗ ಮೂರ್ತಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್, ಕೈಗಾರಿಕಾ ಇಲಾಖೆಯ ಶಬೀರ್ ಪಾಷ, ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ಗುರುಸ್ವಾಮಿ, ತಾ.ವಿ.ಲೋಹಿತ್ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News