ಜಿಲ್ಲೆಯಲ್ಲಿ ಬರಗಾಲದ ಸಮಸ್ಯೆಯನ್ನು ಎದುರಿಸಲು ತ್ವರಿತ ಕಾಮಗಾರಿ ಕೈ ಗೊಳ್ಳಲು ಕ್ರಮ-ರಮಾನಾಥ ರೈ

Update: 2017-02-17 13:55 GMT

ಮಂಗಳೂರು,ಫೆ.17:ಈ ಬಾರಿ ದ.ಕ ಜಿಲ್ಲೆಯಲ್ಲಿ ಹಿಂಗಾರು ಮಳೆ ಕುಂಠಿತವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಮಂಗಳೂರು ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ರಾಜ್ಯ ಸರಕಾರ ಘೋಷಣೆ ಮಾಡಿದೆ ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಬರಪರಿಸ್ಥಿತಿಯನ್ನು ಎದುರಿಸಲು ತ್ವರಿತ ಕಾಮಗಾರಿಗಳನ್ನು ಕೈ ಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬರಪೀಡಿತ ಪ್ರದೇಶಗಳಲ್ಲಿ ಮುಂದಿನ ಯೋಜನೆಗಳ ಬಗ್ಗೆ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಅವರು ಇಂದು ಮಾತನಾಡಿದರು.
 ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಸಾಕಷ್ಟು ಸಂದರ್ಭದಲ್ಲಿ ಬರ ಕಾಡಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿರಲಿಲ್ಲ. ಜಿಲ್ಲೆಯ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಎರಡು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ.ಈ ಹಿನ್ನೆಲೆಯಲ್ಲಿ ಮುಖ್ಯವಾಗಿ ಕುಡಿಯುವ ನೀರು ಹಾಗೂ ಬರಪರಿಸ್ಥಿತಿಯನ್ನು ಎದುರಿಸಲು ಜಿಲ್ಲೆಯಾದ್ಯಂತ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ ಕಾಮಗಾರಿಗಳನ್ನು ಕೈ ಗೊಳ್ಳಬೇಕಾಗಿದೆ ಎಂದು ರಮಾನಾಥ ರೈ ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಜಿಲ್ಲೆಯ 5 ತಾಲೂಕುಗಳಲ್ಲಿ 933 ಕುಡಿಯುವ ನೀರಿನ ಕಾಮಗಾರಿಗಳನ್ನು ಗುರುತಿಸಲಾಗಿದೆ ಇದನ್ನು ಪೂರೈಸಲು 19.86 ಕೋಟಿ ರೂಪಾಯಿಗಳ ಪ್ರಸ್ತಾವನೆಯನ್ನುಸರಕಾರಕ್ಕೆ ಕಳುಹಿಸಲಾಗಿದೆ .ಮಂಗಳೂರು ತಾಲೂಕಿನಲ್ಲಿ ಕೆರೆ ಸಂಜೀವಿನಿ ಯೋಜನೆಯ ಮೂಲಕ 19 ಕರೆಗಳ ಅಭಿವೃದ್ಧಿ,ಬಂಟ್ವಾಳದಲ್ಲಿ 42 ಕರೆಗಳ ಅಭಿವೃದ್ಧಿಗೆ ಒಟ್ಟು 13.32 ಕೋಟಿ ರೂ ಗಳ ಪ್ರಸ್ತಾವನೆಯನ್ನು,ಮತ್ತು ಬರಪೀಡಿತ ಪ್ರದೇಶಗಳಿಗೆ ಹೆಚ್ಚು ವರಿ ಅನುದಾನಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್.ರವಿ ಸಭೆಗೆ ತಿಳಿಸಿದರು.

ಸಭೆಯಲ್ಲಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಮೊಯ್ದಿನ್ ಬಾವ ,ಜಿಲ್ಲಾಧಿಕಾರಿ ಡಾ.ಜಗದೀಶ್,ಅಪರ ಜಿಲ್ಲಾಧಿಕಾರಿ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News