ಬರ: ತಾಲೂಕು ಮಟ್ಟದಲ್ಲಿ ಸಮಿತಿ ರಚನೆ
ಮಂಗಳೂರು, ಫೆ.17: 2016-17 ನೇ ಸಾಲಿನ ಹಿಂಗಾರು ಹಂಗಾಮಿಗೆ ಅನುಬಂಧದಲ್ಲಿ ದ.ಕ ಜಿಲ್ಲೆಯ ಮಂಗಳೂರು ಮತ್ತು ಬಂಟ್ವಾಳ ತಾಲೂಕನ್ನು ಮುಂದಿನ 6 ತಿಂಗಳ ಅವಧಿವರೆಗೆ ಅಥವಾ ಮುಂದಿನ ಆದೇಶದವರೆಗೆ ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಿ ಸರಕಾರವು ಆದೇಶಿಸಿದೆ.
ಬರಪೀಡಿತ ಪ್ರದೇಶಗಳೆಂದು ಘೋಷಿಸಿರುವ ತಾಲೂಕುಗಳಲ್ಲಿ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಭೂರಹಿತ ಕಾರ್ಮಿಕರು, ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಒದಗಿಸುವ ಕ್ರಮ, ಕುಡಿಯುವ ನೀರು ಸರಬರಾಜು, ಮೇವು ಸರಬರಾಜು ಮತ್ತು ಜಾನುವಾರು ಸಂರಕ್ಷಣೆ ಇತ್ಯಾದಿ ಬರಪರಿಹಾರಗಳ ಕಾರ್ಯಗಳನ್ನು ಎಸ್.ಡಿ.ಆರ್.ಎಫ್/ಎನ್.ಡಿ.ಆರ್.ಎಫ್ ಮಾರ್ಗಸೂಚಿಯ ಪ್ರಕಾರ ಮಂಗಳೂರು ಹಾಗೂ ಬಂಟ್ವಾಳ ತಾಲೂಕುಗಳಲ್ಲದೆ, ಪುತ್ತೂರು, ಬೆಳ್ತಂಗಡಿ, ಸುಳ್ಯ ತಾಲೂಕುಗಳಲ್ಲಿ ಸಹ ಬೇಸಿಗೆ ಕಾಲದಲ್ಲಿ ಉಂಟಾಗಬಹುದಾದ ಕುಡಿಯುವ ನೀರಿನ ಹಾಗೂ ಇನ್ನಿತರ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಪ್ರತಿ ತಾಲೂಕುಗಳಲ್ಲಿ ಆಯಾ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.
ತಾ.ಪಂ. ಕಾರ್ಯನಿರ್ವಹಣಾಧಿಕಾರಿ, ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಮೆಸ್ಕಾಂ ಹಾಗೂ ಆಯಾ ಸ್ಥಳೀಯ ನಗರ ಸಂಸ್ಥೆಯ ಮುಖ್ಯಾಧಿಕಾರಿಗಳು ಸಮಿತಿಯಲ್ಲಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ ಕಂಟ್ರೋಲ್ ರೂಂ, ಟ್ಯಾಂಕರ್ ಮೂಲಕ ನಿರು ಪೂರೈಕೆ, ಜಾನುವಾರುಗಳಿಗೆ ನೀರು, ಮೇವು ಒದಗಿಸಲು ಕ್ರಮ, ಬೆಳೆ ಹಾನಿ ಸಮೀಕ್ಷೆ, ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಒದಗಿಸುವುದು, ಕೆರೆಗಳ ಹೂಳೆತ್ತಲು ಕ್ರಮ ಕೈಗೊಳ್ಳುವುದು ಮತ್ತಿತರ ವಿಷಯಗಳನ್ನು ಈ ಸಮಿತಿ ನಿರ್ವಹಿಸಲಿದ್ದು, ಪ್ರತೀ 15 ದಿನಗಳಿಗೊಮ್ಮೆ ವರದಿ ಸಲ್ಲಿಸಲು ಸಮಿತಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.