ಮಕ್ಕಳಾಗದ ಕೊರಗು: ಆತ್ಮಹತ್ಯೆಗೆ ಶರಣಾದ ದಂಪತಿ
ಶಿವಮೊಗ್ಗ, ಫೆ. 17: ಮಕ್ಕಳಾಗದ ಕೊರಗಿನಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಪ್ರತ್ಯೇಕ ಸ್ಥಳಗಳಲ್ಲಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಮುಂಬಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾವಂತೂರು ಗ್ರಾಮದಲ್ಲಿ ನಡೆದಿದೆ. ಪತಿ ನಾಗರಾಜ್ (45) ಹಾಗೂ ಪತ್ನಿ ಜಯಂತಿ (43) ಆತ್ಮಹತ್ಯೆಗೆ ಶರಣಾದವರೆಂದು ಗುರುತಿಸಲಾಗಿದೆ.
ಜಯಂತಿಯವರ ಶವ ಮನೆಯಿಂದ ಸುಮಾರು ಅರ್ಧ ಕಿ.ಮೀ. ದೂರದಲ್ಲಿರುವ ಬಾವಿಯಲ್ಲಿ ಪತ್ತೆಯಾಗಿದೆ. ನಾಗರಾಜ್ ಅವರ ಶವವು ಮನೆಯ ಹಿಂಭಾಗದಲ್ಲಿ ಪತ್ತೆಯಾಗಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗುರುವಾರ ರಾತ್ರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದ್ದು, ಶುಕ್ರವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.
ಸುಮಾರು 11 ವರ್ಷಗಳ ಹಿಂದೆ ಇವರ ವಿವಾಹವಾಗಿದ್ದು, ಮಕ್ಕಳಾಗಿರಲಿಲ್ಲ. ಇದರಿಂದ ಜಿಗುಪ್ಸೆಗೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.