ಪುಣೆ ತಂಡದ ನಾಯಕತ್ವಕ್ಕೆ ಧೋನಿ ಗುಡ್‌ಬೈ
ಪುಣೆ, ಫೆ.19: ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಐಪಿಎಲ್ ತಂಡ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್‌ನ ನಾಯಕತ್ವವನ್ನು ತ್ಯಜಿಸಿದ್ದಾರೆ.
ಮುಂಬರುವ ಐಪಿಎಲ್‌ನಲ್ಲಿ ಧೋನಿಯಿಂದ ತೆರವಾದ ಸ್ಥಾನದಲ್ಲಿ ಆಸ್ಟ್ರೇಲಿಯದ ನಾಯಕ ಸ್ಟೀವನ್ ಸ್ಮಿತ್ ಆಯ್ಕೆಯಾಗಿದ್ದಾರೆ. ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆಗೆ ಮುನ್ನಾದಿನವಾದ ರವಿವಾರ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಈಗಾಗಲೇ ಭಾರತದ ಸೀಮಿತ ಓವರ್ ಕ್ರಿಕೆಟ್ ತಂಡದ ನಾಯಕತ್ವವನ್ನು ತ್ಯಜಿಸಿರುವ ಧೋನಿ ಈವರೆಗೆ ನಡೆದ 9 ಆವೃತ್ತಿಯ ಐಪಿಎಲ್‌ನಲ್ಲಿ ಪ್ರತಿ ಐಪಿಎಲ್ ಪಂದ್ಯಗಳಲ್ಲಿ ನಾಯಕನಾಗಿದ್ದ ಏಕೈಕ ಆಟಗಾರ. ಧೋನಿ ಕಳೆದ ವರ್ಷದ ಐಪಿಎಲ್‌ನಲ್ಲಿ 12 ಇನಿಂಗ್ಸ್‌ಗಳಲ್ಲಿ 284 ರನ್ ಗಳಿಸಿ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಪುಣೆ ತಂಡ ಕಳೆವ ವರ್ಷ 35ರ ಪ್ರಾಯದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಧೋನಿ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿತ್ತು. ಧೋನಿ 2010 ಹಾಗೂ 2011ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸತತ ಎರಡು ಪ್ರಶಸ್ತಿಗಳನ್ನು ಜಯಿಸಲು, ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಪ್ರಶಸ್ತಿ ಗೆಲ್ಲಲು ಪ್ರಮುಖ ಪಾತ್ರವಹಿಸಿದ್ದರು.
ಧೋನಿ ನಾಯಕತ್ವದಲ್ಲಿ ಚೆನ್ನೈ ತಂಡ ವಿಶ್ವದ ಟ್ವೆಂಟಿ-20 ಕ್ಲಬ್ ಕ್ರಿಕೆಟ್‌ನಲ್ಲಿ ಅತ್ಯಂತ ಯಶಸ್ವಿ ತಂಡವಾಗಿ ಗುರುತಿಸಿಕೊಂಡಿತ್ತು. ಆದರೆ, ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಪುಣೆ ತಂಡ ಧೋನಿ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿತ್ತು. ಟೂರ್ನಮೆಂಟ್‌ನ ಆರಂಭದಲ್ಲಿ ಕೆಲವು ಆಟಗಾರರು ಗಾಯಗೊಂಡು ತಂಡದಿಂದ ದೂರವುಳಿದರು. ಪುಣೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿತ್ತು. ಕೇವಲ 5 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿತ್ತು. ಧೋನಿ ಐಪಿಎಲ್‌ನಲ್ಲಿ ಮೊದಲ ಬಾರಿ ತಂಡವನ್ನು ಪ್ಲೇ-ಆಫ್‌ನತ್ತ ಮುನ್ನಡೆಸಲು ವಿಫಲರಾಗಿದ್ದರು.
ಈ ವರ್ಷ ಅದೃಷ್ಟದ ಪರೀಕ್ಷೆಗೆ ಇಳಿದಿರುವ ಪುಣೆ 11 ಆಟಗಾರರನ್ನು ತಂಡದಿಂದ ಬಿಡುಗಡೆ ಮಾಡಿದ್ದು, ಬೆಂಗಳೂರಿನಲ್ಲಿ ಸೋಮವಾರ ನಡೆಯಲಿರುವ ಆಟಗಾರರ ಹರಾಜಿನಲ್ಲಿ ಹೆಚ್ಚಿನ ಆಟಗಾರರನ್ನು ಖರೀದಿಸುವ ಸಾಧ್ಯತೆಯಿದೆ.