ಮಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ತಾಲೂಕು ಮಟ್ಟದ ಕ್ರೀಡಾಕೂಟ
ಮಂಗಳೂರು, ಫೆ.27: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ಮತ್ತು ನಗರ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಂಗಳೂರು ತಾಲೂಕು ಮಟ್ಟದ ಕ್ರೀಡಾ ಕೂಟವು ಫೆ.26 ರಂದು ಮಂಗಳಾ ಕ್ರೀಡಾಂಗಣದಲ್ಲಿ ನಡೆಯಿತು.
ಶಾಸಕ ಜೆ.ಆರ್.ಲೋಬೊ ಅವರು ಕ್ರೀಡಾ ಧ್ವಜಾರೋಹಣ ನೇರವೇರಿಸಿ, ಆರೋಗ್ಯದ ದೃಷ್ಟಿಯಿಂದ ಕ್ರೀಡೆ ಮಹಿಳೆಯರಿಗೆ ಅತ್ಯವಶ್ಯಕವಾಗಿದೆ. ಕರ್ತವ್ಯ ನಿರ್ವಹಿಸುವುದರ ಜೊತೆಗೆ ಕ್ರೀಡೆಯಲ್ಲಿ ತೊಡಗಿಕೊಂಡು ಮಹಿಳೆಯರು ಮಾನಸಿಕವಾಗಿ ಸಾಕಷ್ಟು ಸದೃಡರಾಗಬೇಕು. ಈ ನಿಟ್ಟಿನಲ್ಲಿ ಸರಕಾರವು ಮೊದಲ ಬಾರಿಗೆ ತಾಲೂಕು, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಮಹಿಳಾ ಕ್ರೀಡಾಕೂಟವನ್ನು ಎಲ್ಲಾ ವರ್ಗದ ಮಹಿಳೆಯರಿಗಾಗಿ ಆಯೋಜಿಸಿರುವ ಸರಕಾರದ ಕ್ರಮ ಶ್ಲಾಘನೀಯವಾಗಿದೆ ಎಂದು ಶುಭ ಹಾರೈಸಿದರು.
ಮಂಗಳೂರು ಉತ್ತರ ಶಾಸಕ ಬಿ.ಎ. ಮೊದಿನ್ ಬಾವ ಅವರು ವಿಜೇತ ಮಹಿಳಾ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ವಿತರಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರಪಾಲಿಕೆ ಸದಸ್ಯರಾದ ಜಯಂತಿ ಆಚಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಸುಂದರ ಪೂಜಾರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿ'ಸೋಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ನಟರಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಉಸ್ಮಾನ್ ಎ., ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸದಾನಂದ ಜಿ., ಮಂಗಳೂರು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೆಂಕಪ್ಪಎಂ., ಸ್ರೀಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷೆ ಚಾಂದ್ ಸುಲ್ತಾನ್, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮಹಿಳಾ ಸದಸ್ಯರು ಉಪಸ್ಥಿರಿದ್ದರು.
ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ಯಾಮಲಾ ಸಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮೇಲ್ವಿಚಾರಕಿ ಮಾಲಿನಿ ಕ್ರೀಡಾ ಪ್ರತಿಜ್ಞೆ ಭೋದಿಸಿದರು. ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿಗಳಾದ ಲಿಲ್ಲಿ ಪಾಯಸ್ ವಂದಿಸಿದರು. ಕಾರ್ಯಕ್ರಮದಲ್ಲಿ ಸುಮಾರು 600 ಮಹಿಳಾ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು.