ಬಾಳೆಪುಣಿ: ಅಧಿಕಾರಿಗಳು-ಜನಪ್ರತಿನಿಧಿಗಳ ಸಮಾಲೋಚನಾ ಸಭೆ
ಕೊಣಾಜೆ, ಮಾ.7: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಎಲ್ಲ ಗ್ರಾಮ ಪಂಚಾಯಿತಿಗಳ ಸಹಕಾರದಿಂದ ಸುಮಾರು 48ಕೋಟಿ ರೂ. ಗಳ ಕಾಮಗಾರಿ ನಡೆಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವಿ ಹೇಳಿದರು.
ಬಾಳೆಪುಣಿ ಗ್ರಾಮ ಪಂಚಾಯಿತಿಯ ಹೂ ಹಾಕುವ ಕಲ್ಲಿನ ಜಿ.ಪ.ಹಿ.ಪ್ರಾ. ಶಾಲೆಯ ರಂಗಮಂದಿರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಬಂಟ್ವಾಳ ತಾಲೂಕು ಪಂಚಾಯಿತಿ, ಕುರ್ನಾಡು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಬಾಳೆಪುಣಿ, ನರಿಂಗಾನ, ಪಜೀರು, ಇರಾ ಹಾಗೂ ಕುರ್ನಾಡು ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಜನಪ್ರತಿನಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಮಂಗಳವಾರ ನಡೆದ ಅಭಿವೃದ್ಧಿ ಕಾರ್ಯಕ್ರಮದ ಬಗ್ಗೆ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
ಮಹಾತ್ಮಾ ಗಾಂಧಿ ರಾಷ್ಟ್ರಿೀಯ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡರೆ ನಿಜಕ್ಕೂ ಗ್ರಾಮದ ಅತಿ ಹೆಚ್ಚಿನ ಬೇಡಿಕೆ ಈಡೇರಿಸಿಕೊಳ್ಳಲು ಸಾಧ್ಯ. ಈ ಯೋಜನೆಯಡಿಯಲ್ಲಿ ವಿವಿಧ ಕಾಮಗಾರಿ ನಡೆಸಲು ಅವಕಾಶವಿದ್ದು ನೀರಿನ ಹರಿವು ಇರುವ ತೊರೆಗಳ ಬದಿಯಲ್ಲಿ ಕಿಂಡಿ ಆಣೆಕಟ್ಟು ಮಾಡುವುದರಿಂದ, ತುರ್ತು ಅಗತ್ಯ ಇರುವಲ್ಲಿ ಕಾಲುಸಂಕ ನಿರ್ಮಿಸುವುದು ಸೇರಿದಂತೆ ಅಗತ್ಯದ ಕಾಮಗಾರಿಗಳನ್ನು ನಡೆಸುವುದು ಸೇರಿದಂತೆ ಬಹುಮುಖ್ಯ ಅವಶ್ಯಕತೆಗಳನ್ನು ಈಡೇರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಬಾಳೆಪುಣಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ್ ಆರ್. ಕರ್ಕೇರ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್.ಆರ್. ಉಮೇಶ್, ಬಂಟ್ವಾಳ ತಾಲೂಕು ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಗಿರೀಶ್, ಪಂಚಾಯತ್‌ರಾಜ್ ಎಂಜಿನಿಯರಿಂಗ್ ವಿಭಾಗ ಸಹಾಯಕ ಕಾರ್ಯಕಾರಿ ಅಭಿಯಂತರ ನರೇಂದ್ರ ಬಾಬು, ಬಂಟ್ವಾಳ ತಾಲೂಕು ವಲಯ ಅರಣ್ಯ ಅಧಿಕಾರಿ, ಬಂಟ್ವಾಳ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಮಿರಾಂದ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ, ಬಂಟ್ವಾಳ ತಾಲೂಕು ಪಂಚಾಯಿತಿ ಸದಸ್ಯ ನವೀನ್ ಪಾದಲ್ಪಾಡಿ, ಬಂಟ್ವಾಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಸಿಪ್ರಿಯನ್ ಮಿರಾಂದ, ಕುರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಮಿತ್ತಕೋಡಿ, ಬಾಳೆಪುಣಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವನಿತಾ ಬಿ. ರೈ, ನರಿಂಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ, ಪಜೀರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೀತಾರಾಮ ಶೆಟ್ಟಿ, ಇರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಪ್ರಗತಿ ಪರಿಶೀಲನೆ ಸಮಿತಿ ಸದಸ್ಯ ನರಿಂಗಾನ ಎನ್. ಪದ್ಮನಾಭ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಲೋಕೇಶ್, ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿ ಸುಧಾಕರ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಸಂತೋಷ್ ಹಾಗೂ ಜಿಲ್ಲಾ ನೆರವು ಘಟಕದ ಅಧಿಕಾರಿ ಮಂಜು ಮಾಹಿತಿ ನೀಡಿದರು.
ಬಂಟ್ವಾಳ ತಾಲೂಕು ಪಂಚಾಯಿತಿ ಸದಸ್ಯ ಹೈದರ್ ಕೈರಂಗಳ ಕಾರ್ಯಕ್ರಮ ನಿರೂಪಿಸಿದರು.