ನಂಜನಗೂಡು-ಗುಂಡ್ಲುಪೇಟೆ ಕ್ಷೇತ್ರಗಳಿಗೆ ಎ.9ಕ್ಕೆ ಉಪ ಚುನಾವಣೆ
ಬೆಂಗಳೂರು, ಮಾ. 9: ಮೈಸೂರಿನ ನಂಜನಗೂಡು ಮತ್ತು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ನಿರೀಕ್ಷೆಯಂತೆ ಎ.9ಕ್ಕೆ ಉಪ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.
ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ರಾಜೀನಾಮೆ ಹಾಗೂ ಎಚ್.ಎಸ್. ಮಹದೇವ ಪ್ರಸಾದ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಮಾ.14ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಮಾ.21 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಮಾ.22ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮಾ. 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಎ.9ಕ್ಕೆ ಮತದಾನ ನಡೆಯಲಿದೆ. ಎ.13ರಂದು ಆಯಾ ಕ್ಷೇತ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಉಪ ಚುನಾವಣೆ ನಡೆಯಲಿರುವ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿರಲಿದ್ದು, ಮಾ.14ರಂದು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಚುನಾವಣೆ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಂದಿನಿಂದಲೇ ಎ.15ರ ವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರಲಿದೆ ಎಂದು ತಿಳಿಸಲಾಗಿದೆ.