×
Ad

​ ಕೆಳದಿ ಗ್ರಾಮದಲ್ಲಿ 15ಕ್ಕೂ ಹೆಚ್ಚು ಎಚ್1ಎನ್1 ಪ್ರಕರಣ ಪತ್ತೆ

Update: 2017-03-10 23:03 IST

ಸಾಗರ, ಮಾ.10: ಕೆಳದಿ ಭಾಗದಲ್ಲಿ 15ಕ್ಕೂ ಹೆಚ್ಚು ಎಚ್1ಎನ್1 ಪ್ರಕರಣಗಳು ಪತ್ತೆಯಾಗಿರುವ ವಿಷಯ ಬೆಳಕಿಗೆ ಬಂದಿದೆ. ಇದು ಆತಂಕಕಾರಿ ಸಂಗತಿಯಾಗಿದ್ದು, ಸೂಕ್ತ ಮುಂಜಾಗೃತಾ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ಮನವಿ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ವಿಪಕ್ಷ ನಾಯಕ ಆರ್.ಸಿ.ಮಂಜುನಾಥ್ ತಿಳಿಸಿದರು.

ತಾಲೂಕಿನ ಕೆಳದಿಯಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೆಳದಿಯಲ್ಲಿ 15, ಗುಡ್ಡೆಕೌತಿ, ಮರಸ ಗ್ರಾಮದಲ್ಲಿ ತಲಾ 2 ಎಚ್1ಎನ್1 ಪ್ರಕರಣ ಪತ್ತೆಯಾಗಿದ್ದು, ಜನರು ತೀವ್ರ ಗಾಬರಿಯಾಗಿದ್ದಾರೆ. ಎಚ್1ಎನ್1ಗೆ ಅಗತ್ಯವಾದ ಚಿಕಿತ್ಸಾ ಸೌಲಭ್ಯವಿದ್ದು, ಕಾಯಿಲೆಗೆ ತುತ್ತಾದವರು ಗಾಬರಿಯಾಗುವ ಅಗತ್ಯವಿಲ್ಲ. ಆರೋಗ್ಯ ಇಲಾಖೆ ತಿಳಿಸಿರುವ ಮುಂಜಾಗೃತಾ ಕ್ರಮವನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಸಂತ್ರಸ್ತರು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಚಿಕಿತ್ಸೆಗೆ ಹೋದರೆ ಅವರಿಗೆ ಮೆಡಿಕಲ್ ಶಾಪ್‌ಗಳಲ್ಲಿ ಔಷಧಿ ತೆಗೆದುಕೊಳ್ಳುವಂತೆ ಚೀಟಿ ಬರೆದು ಕೊಡಲಾಗುತ್ತಿದೆ. ಇದನ್ನು ರೋಗಿಗಳು ನನ್ನ ಗಮನಕ್ಕೆ ತಂದಿದ್ದು, ಈ ಬಗ್ಗೆ ತಾಲೂಕು ಆರೋಗ್ಯಾಧಿಕಾರಿಗೆ ಎಚ್ಚರಿಕೆ ನೀಡಲಾಗಿದೆ. ಎಚ್1ಎನ್1 ಸಂತ್ರಸ್ತರಿಗೆ ಉಚಿತ ಔಷಧಿಯನ್ನು ನೀಡುವಂತೆ ಸರಕಾರ ತಿಳಿಸಿದ್ದರೂ, ಅವರಿಗೆ ಹೊರಗಿನಿಂದ ಔಷಧಿ ತರುವಂತೆ ಚೀಟಿ ಬರೆದು ಕೊಡುವುದು ಸರಿಯಾದ ಕ್ರಮವಲ್ಲ ಎಂದರು.

ಗ್ರಾಮಾಂತರ ಪ್ರದೇಶದಲ್ಲಿ ಕಾಲಕಾಲಕ್ಕೆ ಬರುವ ಬೇರೆಬೇರೆ ಕಾಯಿಲೆಗಳ ಕುರಿತು ಜಾಗೃತಿ ಮೂಡಿಸುವ ಬಗ್ಗೆ ಆರೋಗ್ಯ ಇಲಾಖೆ ನಿಗಾವಹಿಸಬೇಕು. ಆಶಾಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು ಉತ್ತಮವಾಗಿ ಕೆಲಸ ಮಾಡುತ್ತಿದ್ದರೂ, ಉಪವಿಭಾಗೀ ಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ವ್ಯವಸ್ಥೆ ಸರಿಪಡಿಸುವ ನಿಟ್ಟಿನಲ್ಲಿ ತಾಲೂಕು ಆರೋಗ್ಯಾಧಿಕಾರಿ ಗಮನ ಹರಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸುರೇಶ್ ಜವಳಿ, ಹಿರಿಯ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News