ಭಡ್ತಿ ಮೀಸಲಾತಿ ರದ್ದು: ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ದಸಂಸ ಪಟ್ಟು

Update: 2017-03-13 15:17 GMT

ಬೆಂಗಳೂರು,ಮಾ.13: ದಲಿತ ಸಮುದಾಯದ ನೌಕರರ ಭಡ್ತಿ ಮೀಸಲಾತಿ ರದ್ದಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು.

 ಸೋಮವಾರ ನಗರದ ಪುರಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ಹಾಗೂ ಸಭೆಯನ್ನುದ್ದೇಶಿಸಿ ಮಾತನಾಡಿದ ಸಮಿತಿ ರಾಜ್ಯಾಧ್ಯಕ್ಷ ಎನ್.ಮೂರ್ತಿ, ದಲಿತ ನೌಕರರ ಭಡ್ತಿ ಮೀಸಲಾತಿಯನ್ನು ಸುಪ್ರೀಂಕೋರ್ಟ್ ರದ್ದು ಮಾಡಿರುವುದರಿಂದ ಸಾವಿರಾರು ಸರಕಾರಿ ದಲಿತ ನೌಕರರ ಭವಿಷ್ಯ ತೂಗುಯ್ಯಿಲೆಯಲ್ಲಿದೆ ಎಂದು ಕಿಡಿಕಾರಿದರು.

ಸುಪ್ರೀಂಕೋರ್ಟ್ ತೀರ್ಪಿನಿಂದ ನೌಕರರು ಆತಂಕಗೊಂಡಿದ್ದಾರೆ. ರಾಜ್ಯ ಸರಕಾರ ನ್ಯಾಯಾಲಯದಲ್ಲಿ ಸಮರ್ಪಕವಾಗಿ ವಾದ ಮಂಡಿಸದೆ, ಸಮರ್ಪಕ ದಾಖಲೆ ಸಲ್ಲಿಸದ ಪರಿಣಾಮ ಇಂತಹ ತೀರ್ಪು ಬಂದಿದೆ. ಕೂಡಲೇ ರಾಜ್ಯ ಸರಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು ಎನ್.ಮೂರ್ತಿ ಆಗ್ರಹಿಸಿದರು.

ನನೆಗುದಿಗೆ ಬಿದ್ದಿರುವ ಮೀಸಲಾತಿ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕು. ಇದರಿಂದ ದಲಿತರಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ದೊರಕಲಿದೆ. ರಾಜ್ಯ ಸರಕಾರ ಕೂಡಲೆ ಕೇಂದ್ರಕ್ಕೆ ನಿಯೋಗ ಕೊಂಡೊಯ್ದು ಮನವರಿಕೆ ಮಾಡಿಕೊಡಬೇಕು. ಅದೇ ರೀತಿ, ಕೇಂದ್ರ ಸರಕಾರ ತೀರ ವಿಳಂಬವಾಗಿರುವ ಬಡ್ತಿ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿ ಸಂವಿಧಾನದ 117ನೆ ತಿದ್ದುಪಡಿಗೊಳಿಸಿ ಭಡ್ತಿ ಮೀಸಲಾತಿ ಕಲ್ಪಿಸಬೇಕೆಂದು ಪಟ್ಟು ಹಿಡಿದರು.

ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನ ಮಾಡಿ ಒಳ ಮೀಸಲಾತಿ ಕಲ್ಪಿಸಬೇಕು. ಪ್ರಸಕ್ತ ಬಜೆಟ್‌ನಲ್ಲಿ ಶೇ.25ರಷ್ಟು ಹಣವನ್ನು ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಡಬೇಕೆಂದು ಒತ್ತಾಯಿಸಿದ ಅವರು, ಸರಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News