‘ಕೂಪನ್’ ವ್ಯವಸ್ಥೆ ರದ್ದು: ಆಹಾರ ಸಚಿವ ಯು.ಟಿ.ಖಾದರ್

Update: 2017-03-16 14:01 GMT

ಬೆಂಗಳೂರು, ಮಾ. 16: ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರಕ್ಕೆ ಕಡ್ಡಾಯಗೊಳಿಸಿದ್ದ ‘ಕೂಪನ್’ ವ್ಯವಸ್ಥೆ ರದ್ದುಪಡಿಸಿದ್ದು, ನ್ಯಾಯಬೆಲೆ ಅಂಗಡಿಗಳಲ್ಲೆ ಬಯೋ ಮೆಟ್ರಿಕ್ ವ್ಯವಸ್ಥೆ ಮೂಲಕ ಬಿಪಿಎಲ್ ಕಾರ್ಡುದಾರರಿಗೆ ಪಡಿತರ ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಗುರುವಾರ ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ಪಕ್ಷೇತರ ಸದಸ್ಯ ಎಸ್.ಎನ್.ಸುಬ್ಬಾರೆಡ್ಡಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ನಕಲಿ ಪಡಿತರ ಚೀಟಿ ತಡೆಗೆ ಆಧುನಿಕ ತಂತ್ರಜ್ಞಾನ ಅಳವಡಿಸಿದ್ದು, ಪಡಿತರ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸಲು ಸುಧಾರಣೆ ಹಿನ್ನೆಲೆಯಲ್ಲಿ ಕೆಲ ತೊಂದರೆಗಳಾಗಿವೆ. ಇದೀಗ ಎಲ್ಲವನ್ನೂ ಸರಿಪಡಿಸಲಾಗಿದೆ ಎಂದರು.

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ ಹದಿನೈದು ದಿನಗಳ ಒಳಗಾಗಿ ಅಂಚೆ ಸ್ಪೀಡ್ ಪೋಸ್ಟ್ ಮೂಲಕ ಕಾರ್ಡ್ ಫಲಾನುಭವಿಗಳ ಮನೆ ತಲುಪಲಿದೆ ಎಂದ ಅವರು, ಪಾಸ್‌ಪೋರ್ಟ್‌ಗಿಂತಲೂ ವೇಗವಾಗಿ ಪಡಿತರ ಚೀಟಿ ನೀಡುವ ವ್ಯವಸ್ಥೆ ರೂಪಿಸಲಾಗಿದೆ ಎಂದು ಖಾದರ್ ತಿಳಿಸಿದರು.

ನ್ಯಾಯಬೆಲೆ ಅಂಗಡಿಗಳ ಮೂಲಕ ಬಯೋ ಮೆಟ್ರಿಕ್ ಆಧರಿಸಿ ಪಡಿತರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಆದರೆ, ಬಯೋ ಮೆಟ್ರಿಕ್ ವ್ಯವಸ್ಥೆಗೆ ಇಂಟರ್‌ನೆಟ್ ಅಗತ್ಯ. ಆದರೆ, ಇಂಟರ್‌ನೆಟ್ ಸಂಪರ್ಕವಿಲ್ಲದ ಪ್ರದೇಶಗಳಲ್ಲಿ ಬಯೋ ಮೆಟ್ರಿಕ್ ವ್ಯವಸ್ಥೆ ಇಲ್ಲದೆ ಬಿಪಿಎಲ್ ಫಲಾನುಭವಿಗಳಿಗೆ ಪಡಿತರ ವಿತರಣೆ ಮಾಡಲಾಗುವುದು ಎಂದರು.

ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಸದಸ್ಯ ಸುಬ್ಬಾರೆಡ್ಡಿ, ಪಡಿತರ ಚೀಟಿಗೆ ಆಧಾರ್ ಸಂಖ್ಯೆ ಜೋಡಿಸುವ ಕಾರ್ಯ ವಿಳಂಬ ಆಗುತ್ತಿದೆ. ಗ್ರಾಮೀಣ ಪ್ರದೇಶದ ಬಡವರಿಗೆ ಆನ್‌ಲೈನ್ ಗೊತ್ತಿಲ್ಲ. ನ್ಯಾಯಬೆಲೆ ಅಂಗಡಿ ಮಾಲಕರಿಗೆ ಆಧಾರ್ ಕಾರ್ಡ್ ಸಂಖ್ಯೆ ಜೋಡಿಸುವ ಜವಾಬ್ದಾರಿ ನೀಡಬೇಕೆಂದು ಆಗ್ರಹಿಸಿದರು.

ಇದಕ್ಕೆ ಧ್ವನಿಗೂಡಿಸಿದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ರಾಜ್ಯದಲ್ಲಿ ಪಡಿತರ ಚೀಟಿ ವ್ಯವಸ್ಥೆ ಸಂಪೂರ್ಣ ಗೊಂದಲದ ಗೂಡಾಗಿದೆ. ಕೂಪನ್ ವ್ಯವಸ್ಥೆ, ಆಧಾರ್ ಜೋಡಣೆ ನೆಪದಲ್ಲಿ ಬಡವರಿಗೆ ಇನ್ನಿಲ್ಲದ ತೊಂದರೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಬಳಿಕ ಪ್ರತಿಕ್ರಿಯಿಸಿದ ಆಹಾರ ಸಚಿವ ಖಾದರ್, ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿಗಾಗಿ ಒಟ್ಟು 7 ಲಕ್ಷ ಹೊಸ ಅರ್ಜಿಗಳು ಬಂದಿದ್ದು, ಸ್ಥಳ ಪರಿಶೀಲನೆ ಬಗ್ಗೆ ಶೀಘ್ರದಲ್ಲೆ ತೀರ್ಮಾನ ಕೈಗೊಳ್ಳಲಾಗುವುದು. ಆನಂತರ ಅರ್ಹ ಫಲಾನುಭವಿಗಳಿಗೆ ಕಾರ್ಡ್ ವಿತರಣೆ ಮಾಡಲಾಗುವುದು ಎಂದರು.

ಎಲ್ಲರಿಗೂ ಸಂಪರ್ಕ: ಅಡುಗೆ ಅನಿಲ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವ ಎಲ್ಲರಿಗೂ ಅರ್ಜಿ ಸಲ್ಲಿಸಿದ ಹದಿನೈದು ದಿನಗಳಲ್ಲೆ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆಡಳಿತ ಪಕ್ಷದ ಸದಸ್ಯ ಟಿ.ವೆಂಕಟರಮಣಯ್ಯ ಅವರು ಕೇಳಿದ ಪ್ರಶ್ನೆಗೆ ಸಚಿವ ಖಾದರ್ ಉತ್ತರ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News