ಬಜೆಟ್‌ನಲ್ಲಿ ಕರಾವಳಿಗೆ ಹೆಚ್ಚಿನ ಆದ್ಯತೆ: ದ.ಕ. ಜಿಲ್ಲಾ ಕಾಂಗ್ರೆಸ್ ಶ್ಲಾಘನೆ
ಮಂಗಳೂರು, ಮಾ.18: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಕರಾವಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಇದಕ್ಕಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ಮುಖ್ಯಮಂತ್ರಿಯನ್ನು ಅಭಿನಂದಿಸುವುದಾಗಿ ಕಾಂಗ್ರೆಸ್ ಜಿಲ್ಲಾ ಪ್ರಭಾರ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಹೇಳಿದ್ದಾರೆ.
ಶನಿವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್‌ಗೆ ಮುನ್ನ ಜಿಲ್ಲಾ ಕಾಂಗ್ರೆಸ್ ನಿಯೋಗ ಜಿಲ್ಲೆಗೆ ಸಂಬಂಧಿಸಿ ಬಜೆಟ್‌ನಲ್ಲಿ ಘೋಷಿಸಬೇಕಾದ ಅಂಶಗಳ ಬಗ್ಗೆ ಮನವಿ ಮಾಡಿತ್ತು. ಅದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಜಿಲ್ಲೆಯಲ್ಲಿ ಎರಡು ತಾಲೂಕುಗಳ ಘೋಷಣೆ, ಮಂಗಳೂರು ವಿವಿಯಲ್ಲಿ ಬ್ಯಾರಿ ಅಧ್ಯಯನ ಕೇಂದ್ರ, ಮಂಗಳೂರಿನಲ್ಲಿ ಹಜ್ ಭವನಕ್ಕೆ 10 ಕೋ.ರೂ., ವೆನ್ಲಾಕ್ ಆಸ್ಪತ್ರೆ ಮೇಲ್ದರ್ಜೆಗೆ ಕ್ರಮ ಹೀಗೆ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ ಎಂದರು.
*ಬಿಜೆಪಿ ಗೆಲುವಲ್ಲ: ಇತ್ತೀಚೆಗೆ ಐದು ರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 3 ರಾಜ್ಯಗಳಲ್ಲಿ ಗೆದ್ದಿದೆ. ಆದರೆ, ಬಿಜೆಪಿ ಕುತಂತ್ರದಿಂದ 2 ರಾಜ್ಯಗಳ ಅಧಿಕಾರವನ್ನು ಕಿತ್ತುಕೊಂಡಿದೆ. ಇದು ಬಿಜೆಪಿಯ ಗೆಲುವಲ್ಲ. ಮೋದಿಯ ಸೋಲು ಎಂದು ಇಬ್ರಾಹೀಂ ಕೋಡಿಜಾಲ್ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ತನ್ನ ಮಾತಿನಿಂದ ಜನರನ್ನು ಮರಳುಗೊಳಿಸುತ್ತಿದ್ದಾರೆ. ಹೀಗಾಗಿ ಉತ್ತರಪ್ರದೇಶದಲ್ಲಿ ಜಾತ್ಯತೀತ ಮತಗಳು ವಿಭಜನೆಯಾಗಿವೆ. ಅದರ ಲಾಭವನ್ನು ಬಿಜೆಪಿ ಪಡೆದುಕೊಂಡಿದೆ ಎಂದು ಇಬ್ರಾಹೀಂ ಕೋಡಿಜಾಲ್ ಆಪಾದಿಸಿದರು.
ಸುದ್ದಿಗೋಷ್ಠಿಯಲ್ಲಿ ಮೇಯರ್ ಕವಿತಾ ಸನಿಲ್, ಉಪಮೇಯರ್ ರಜನೀಶ್, ಕವಿತಾ ವಾಸು, ನಝೀರ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.