ಕುಡಿಯುವ ನೀರಿನ ದೂರುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ

Update: 2017-03-20 18:54 GMT

ಮಂಗಳೂರು, ಮಾ.20: ಕುಡಿಯುವ ನೀರು ಸಮಸ್ಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬರುವ ಮನವಿಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಸೂಚಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸ್ಥಿತಿಗತಿ ಬಗ್ಗೆ ಚರ್ಚಿಸಲು ಸೋಮವಾರ ತನ್ನ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಕುಡಿಯುವ ನೀರಿನ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ. ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಅಗತ್ಯಾನುಸಾರ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಇನ್ನೂ ಅನುದಾನ ಬೇಕಿದ್ದಲ್ಲಿ ಸೂಕ್ತ ಪ್ರಸ್ತಾವ ಸಲ್ಲಿಸಬೇಕು. ನೀರಿನ ಸಮಸ್ಯೆಗಳು ತ್ವರಿತವಾಗಿ ಪರಿಹಾರವಾಗಬೇಕೆಂದು ಸರಕಾರದ ಆಶಯವಾಗಿದೆ ಎಂದು ಅವರು ಹೇಳಿದರು.

ಆಯಾ ಗ್ರಾಪಂ ಅಥವಾ ನಗರ ಸ್ಥಳೀಯ ಸಂಸ್ಥೆಗಳಲ್ಲೇ ನೀರಿನ ಸಮಸ್ಯೆಗಳಿಗೆ 24 ಗಂಟೆಯೊ ಳಗೆ ಪರಿಹಾರ ಸಿಗಬೇಕು. ಕುಡಿಯುವ ನೀರಿನ ಸಮಸ್ಯೆಗಳಿಗೆ ಮೇಲಿನ ಕಚೇರಿಗಳವರೆಗೆ ಸಾರ್ವಜನಿ ಕರು ಬರುವಂತಾಗಬಾರದು. ಈ ನಿಟ್ಟಿನಲ್ಲಿ ತ್ವರಿತವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾ ಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ತೀವ್ರ ಗೊಂಡ ಸಂದರ್ಭದಲ್ಲಿ ಹೊಸ ಬೋರ್‌ವೆಲ್ ಕೊರೆ ಸಲು ಕಾಯದೆ, ಖಾಸಗಿ ಬೋರ್‌ವೆಲ್‌ಗಳಿಂದ ನೀರನ್ನು ತಹಶೀಲ್ದಾರ್ ಮೂಲಕ ಒಪ್ಪಿಗೆ ಪಡೆದು ಸಾರ್ವಜನಿಕರಿಗೆ ಪೂರೈಕೆ ಮಾಡಬೇಕು. ಸ್ಥಳೀಯ ಮಟ್ಟದಲ್ಲಿ ಪಂಚಾ ಯತ್ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮಕರಣಿಕರು ಪರಿಶೀ ಲನೆ ಮಾಡಿ, ನೀರಿನ ಸಮಸ್ಯೆ ಎದುರಾಗಬಹುದಾದ ಪ್ರದೇಶ ಗಳನ್ನು ಗುರುತಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರಾಪಂ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಯ ಬಗ್ಗೆ ಪ್ರತೀ ವಾರ ಜಿಲ್ಲಾಧಿಕಾರಿ ಕಚೇರಿಗೆ ವರದಿ ನೀಡಲು ಡಾ.ಕೆ.ಜಿ. ಜಗದೀಶ ಸೂಚಿಸಿದರು.

ಬರ ಪರಿಹಾರ:  ಮಂಗಳೂರು ಮತ್ತು ಬಂಟ್ವಾಳ ತಾಲೂಕನ್ನು ರಾಜ್ಯ ಸರಕಾರ ಬರಪೀಡಿತ ಎಂದು ಘೋಷಿಸಿರುವುದರಿಂದ 2 ಕೋ.ರೂ. ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ಎರಡೂ ತಾಲೂಕುಗಳಿಗೆ ತಲಾ ರೂ. 30 ಲಕ್ಷ ಬಿಡುಗಡೆ ಮಾಡಲು ಅವರು ಸೂಚಿಸಿದರು.

ಮನಪಾ ಆಯುಕ್ತ ಮುಹಮ್ಮದ್ ನಝೀರ್ ಮಾತನಾಡಿ, ತುಂಬೆ ನೇತ್ರಾವತಿ ಡ್ಯಾಂನಲ್ಲಿ ಇಂದು 5 ಮೀಟರ್ ನೀರು ಸಂಗ್ರಹವಾಗಿದೆ ಎಂದು ತಿಳಿಸಿದರು.
  
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎನ್.ಆರ್. ಉಮೇಶ್, ಅಪರ ಜಿಲ್ಲಾಧಿಕಾರಿ ಕುಮಾರ್, ಮಂಗಳೂರು ಉಪವಿಭಾಗಾಧಿಕಾರಿ ರೇಣುಕಾ ಪ್ರಸಾದ್, ತಹಶೀಲ್ದಾರ್, ತಾಪಂ ಕಾರ್ಯನಿರ್ವಹಣಾಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

ನದಿ ಪಾತ್ರಗಳಲ್ಲಿ ನೀರೆತ್ತದಂತೆ ನಿಗಾ ವಹಿಸಲು ಸೂಚನೆ

ಹೊಸ ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಮೆಸ್ಕಾಂ ವಿಳಂಬಿಸಬಾರದು. ನದಿ ಪಾತ್ರದಲ್ಲಿ ತೋಟಗಳಿಗೆ ತುರ್ತು ಸಂದರ್ಭಗಳನ್ನು ಹೊರತುಪಡಿಸಿ ನದಿಯಿಂದ ಖಾಸಗಿ ಪಂಪ್‌ಸೆಟ್‌ಗಳಲ್ಲಿ ನೀರೆತ್ತದಂತೆ ತೋಟಗಾರಿಕೆ, ಕೃಷಿ, ಮೆಸ್ಕಾಂ ಅಧಿಕಾರಿಗಳು ನಿಗಾ ವಹಿಸಲು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಸೂಚಿಸಿದರು. ಈಗಿನ ನೀರಿನ ಮೂಲದಲ್ಲಿ ನಗರ, ಪಟ್ಟಣ ಪ್ರದೇಶಗಳಲ್ಲಿ ಮೇ ಅಂತ್ಯದವರೆಗೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೀರು ಪೂರೈಸಲು ದಿನ ಬಿಟ್ಟು ದಿನದಲ್ಲಿ ನೀರು ಸರಬರಾಜು ಮಾಡಲು ಜಿಲ್ಲಾಧಿಕಾರಿ ತಿಳಿಸಿದರು.

*ಲಕ್ಯಾ ಡ್ಯಾಂನಿಂದ ನೀರು ಪೂರೈಕೆಗೆ ಪತ್ರ
 ಮಂಗಳೂರು ಮಹಾನಗರಪಾಲಿಕೆಗೆ ಕುದುರೆಮುಖ ಲಕ್ಯಾ ಡ್ಯಾಂನಿಂದ ನೀರನ್ನು ಶಾಶ್ವತವಾಗಿ ಪಂಪಿಂಗ್ ಮಾಡಲು ಅನುಮತಿಸಲು ಕುದುರೆಮುಖ ಸಂಸ್ಥೆಗೆ ಪತ್ರ ಬರೆಯಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News