×
Ad

ನಾಗರಿಕರು ಜಾಗೃತರಾದಾಗ ಯೋಜನೆ ಪೋಲಾಗದು: ಸಚಿವ ರೈ

Update: 2017-03-31 17:25 IST

ಮಂಗಳೂರು, ಮಾ. 31: ಪ್ರತಿಯೊಬ್ಬ ನಾಗರಿಕರೂ ಸಮಾಜದ ಕಣ್ಣಾಗಿ ಜಾಗೃತರಾದಾಗ ಸರಕಾರದ ಯೋಜನೆಗಳಿಂದ ಹೆಚ್ಚು ಜನರಿಗೆ ಅನುಕೂಲವಾಗಲು ಸಾಧ್ಯವಾಗುತ್ತದೆ ಜತೆಗೆ ಕಾರ್ಯಕ್ರಮಗಳು ಪೋಲಾಗುವುದನ್ನು ತಪ್ಪಿಸಬಹುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮನಾಥ ರೈ ಹೇಳಿದ್ದಾರೆ. 

ಅವರು ಇಂದು ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ಆದ್ಯತಾ ಕುಟುಂಬಗಳ ಪ್ರತಿ ಸದಸ್ಯರಿಗೆ 7 ಕೆಜಿ ಉಚಿತ ಆಹಾರ ಧಾನ್ಯ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅನ್ನಭಾಗ್ಯ, ಕ್ಷೀರಭಾಗ್ಯ ಮೊದಲಾದ ಯೋಜನೆಗಳ ಮೂಲಕ ಚುನಾವಣೆಯ ಸಂದರ್ಭ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಹಸಿವು ಮುಕ್ತ ಕರ್ನಾಟಕ ಭರವಸೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ಇಂತಹ ಸಮಾಜಮುಖಿ ಯೋಜನೆಗಳ ಬಗ್ಗೆ ಒಂದು ಕಡೆಯಿಂದ ಟೀಕೆ ಟಿಪ್ಪಣಿಗಳು ಸಹಜ. ಆದರೆ ಈ ಆರೋಪಗಳ ನಡುವೆಯೇ ರಾಜ್ಯ ಸರಕಾರದ ಹಲವಾರು ಯೋಜನೆಗಳು ಬಡವರಿಗೆ ಅನುಕೂಲವಾಗಿ ಪರಿಣಮಿಸಿದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖಾ ಸಚಿವ ಯು.ಟಿ.ಖಾದರ್ ಮಾತನಾಡಿ, ಸರಕಾರದಿಂದ ನೀಡುವ ಯೋಜನೆಗಳು ಅರ್ಹರಿಗೆ ತಲುಪುವಲ್ಲಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸೇರಿದಂತೆ ಜನಪ್ರತಿನಿಧಿಗಳು ತಮ್ಮ ಕರ್ತವ್ಯವನ್ನು ನಿಭಾಯಿಸಬೇಕಾಗಿದೆ ಎಂದರು.

ಪಡಿತರ ವ್ಯವಸ್ಥೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಇಲಾಖೆಯಿಂದ ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮುಂದಿನ ಎರಡು ತಿಂಗಳಲ್ಲಿ ಎಲ್ಲವೂ ಜಾರಿಯಾಗಲಿದೆ ಎಂದು ಅವರು ಈ ಸಂದರ್ಭ ತಿಳಿಸಿದರು.

ಕುಟುಂಬದ ಸದಸ್ಯರೊಬ್ಬರಿಗೆ ತಲಾ 5 ಕೆಜಿ ವಿತರಿಸಲಾಗುತ್ತಿದ್ದ ಅಕ್ಕಿಯನ್ನು ಇದೀಗ ತಲಾ 7 ಕೆಜಿಗಳಿಗೆ ಏರಿಕೆ ಮಾಡಲಾಗಿದೆ. ಇಂದು ಸಾಂಕೇತಿಕವಾಗಿ ಜಿಲ್ಲಾ ಮಟ್ಟದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ನಾಳೆಯಿಂದ ಸಾರ್ವಜನಿಕರ ಪಡಿತರ ವ್ಯವಸ್ಥೆಯ ಮೂಲಕ ವಿತರಣೆಯಾಗಲಿದೆ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದರು.

ಶಾಸಕ ಜೆ.ಆರ್. ಲೋಬೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಂ.ಆರ್. ರವಿ ಉಪಸ್ಥಿತರಿದ್ದರು.

ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕ ಜಯಪ್ಪ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News