ಪಿಎಫ್‌ಐ, ಮುಸ್ಲಿಮ್ ಒಕ್ಕೂಟದಿಂದ ಪ್ರತಿಭಟನೆ

Update: 2017-04-05 18:46 GMT

ಬೆಳ್ತಂಗಡಿ, ಎ.5: ಅಮಾಯಕ ಯುವಕ ಅಹ್ಮದ್ ಖುರೇಷಿ ಎಂಬಾತನನ್ನು ಪೊಲೀಸರು ಬಂಧಿಸಿ ಮಾರಣಾಂತಿಕ ದೌರ್ಜನ್ಯ ಎಸಗಿದ್ದರ ವಿರುದ್ಧ ನಡೆಸಿದ ಪ್ರತಿಭಟನೆಯಲ್ಲಿ ಮುಸ್ಲಿಮ್ ಸಂಘಟನೆಗಳ ನಾಯಕರ ಹಾಗೂ ಕಾರ್ಯಕರ್ತರ ಮೇಲೆ ವಿನಾ ಕಾರಣ ಹಲ್ಲೆ ನಡೆಸಿರುವುದನ್ನು ಖಂಡಿಸಿ ಪಿಎಫ್‌ಐ ಮತ್ತು ಮುಸ್ಲಿಮ್ ಒಕ್ಕೂಟ ಬೆಳ್ತಂಗಡಿ ಮೂರು ಮಾರ್ಗದ ಬಳಿ ಬುಧವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಹೈದರ್ ನೀರ್‌ಸಾಲ್, ಅಮಾಯಕ ಯುವಕ ಖುರೇಷಿಯ ಮೇಲೆ ನಡೆದಂತಹ ದೌರ್ಜನ್ಯ ಮತ್ತು ನ್ಯಾಯ ಪರಿಹಾರಕ್ಕೆ ಶಾಂತಿಯುತ ಪ್ರತಿಭಟನೆ ಮಾಡಿದ್ದು, ಪೊಲೀಸರು ಮುನ್ಸೂಚನೆ ನೀಡದೆ ಏಕಾಏಕಿ ಲಾಠಿ ಚಾರ್ಜ್ ಮಾಡಿ 9 ಮಂದಿ ಗಂಭೀರ ಗಾಯಗೊಂಡಿದ್ದಲ್ಲದೆ 65ಕ್ಕೂ ಅಧಿಕ ಮಂದಿಗೂ ಗಾಯಗಳಾಗಿದೆ. ಇದನ್ನು ನಾವು ಖಂಡಿಸುವುದಲ್ಲದೆ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಕಿಡ್ನಿ ವೈಫಲ್ಯಕ್ಕೊಳಗಾದ ಖುರೇಷಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕು ಹಾಗೂ ಅವರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು. ಈ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ ತಮಗೆ ನ್ಯಾಯ ಸಿಗುವವರೆಗೆ ರಾಜ್ಯಾದ್ಯಂತ ಹೋರಾಟ ಮುಂದುವರಿಯಲಿದೆ. ದೌರ್ಜನ್ಯ ನಡೆಸಿದ ಪೊಲೀಸರ ವಿರುದ್ದ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮೂರು ಮಾರ್ಗದ ಬಳಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಬಳಿಕ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ನೀಡಿದರು. ಎಸ್‌ಡಿಪಿಐ ತಾಲೂಕು ಅಧ್ಯಕ್ಷ ಅಕ್ಬರ್ ಅಲಿ, ಕಾರ್ಯದರ್ಶಿ ನವಾಝ್ ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬಂಟ್ವಾಳ ಡಿವೈಎಸ್ಪಿ ರವೀಶ್ ಸಿಆರ್ ನೇತೃತ್ವದಲ್ಲಿ ಪೊಲೀಸರು ಬಿಗು ಪೊಲೀಸ್ ಬಂದೋಬಸ್ತ್ ಮಾಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News