ಬಿಎಸ್‌ವೈ-ರೇಣುಕಾಚಾರ್ಯ ವಿರುದ್ಧ ಕಾಂಗ್ರೆಸ್ ದೂರು

Update: 2017-04-08 14:14 GMT

ಬೆಂಗಳೂರು, ಎ.8: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ.

 ಶನಿವಾರ ನಗರದ ಶೇಷಾದ್ರಿ ರಸ್ತೆಯಲ್ಲಿರುವ ನಿರ್ವಾಚನ ನಿಲಯದಲ್ಲಿ ಮುಖ್ಯ ಚುನಾವಣಾಧಿಕಾರಿ ಅನಿಲ್‌ಕುಮಾರ್ ಝಾರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ನೇತೃತ್ವದ ಕಾಂಗ್ರೆಸ್ ನಿಯೋಗ ದೂರು ಸಲ್ಲಿಸಿತು.

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಹಂಗಾಲ ಹೋಬಳಿಯ ವಡ್ಡನಹೊಸಹಳ್ಳಿ ಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನೊಬ್ಬನ ಮನೆಗೆ ಭೇಟಿ ನೀಡಿದ ಯಡಿಯೂರಪ್ಪ ಹಾಗೂ ರೇಣುಕಾಚಾರ್ಯ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಮಹಿಳೆಯೊಬ್ಬರಿಗೆ ಒಂದು ಲಕ್ಷ ರೂ.ನಗದು ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ, ಈ ದೂರಿಗೆ ಸಂಬಂಧಿಸಿದಂತೆ ವಿಡಿಯೋ ತುಣುಕನ್ನು ಮುಖ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ನಿಯೋಗ ತೋರಿಸಿತು.

 ಇದಲ್ಲದೆ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಹಣ ಹಂಚಲು ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಬಿಜೆಪಿ ಕಾರ್ಯಕರ್ತರು 5 ಲಕ್ಷ ರೂ.ಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ಈ ಸಂಬಂಧ ಸೂಕ್ತ ಕ್ರಮ ಕೈಗೊಂಡು, ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಲು ಅನುವು ಮಾಡಿಕೊಡಬೇಕು ಎಂದು ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಜೆ.ಹುಚ್ಚಪ್ಪ, ಶಫೀವುಲ್ಲಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News