ಕೌಶಲ, ಜ್ಞಾನದೊಂದಿಗೆ ನೈತಿಕತೆಯಿದ್ದರೆ ಶಿಕ್ಷಣವು ಅದ್ಭುತ: ಪ್ರೊ. ರಾಜಸಾಬ್

Update: 2017-04-08 16:27 GMT

ಮೂಡುಬಿದಿರೆ, ಎ.8: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ವ್ಯಾಸಂಗ ಮಾಡಿದ 1,856 ಮಂದಿ ವಿದ್ಯಾರ್ಥಿಗಳಿಗೆ ವಿದ್ಯಾಗಿರಿಯಲ್ಲಿರುವ ಕೆ.ವಿ. ಸುಬ್ಬಣ್ಣ ಬಯಲು ರಂಗಮಂದಿರದಲ್ಲಿ ಪದವಿ ಪ್ರದಾನ ಮಾಡಲಾಯಿತು.

ಮಂಗಳೂರು ವಿಶ್ವವಿದ್ಯಾಲಯದ 1,025, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 505, ರಾಜೀವ್ ಗಾಂಧಿ ವಿಶ್ವವಿದ್ಯಾಲಯದಡಿಯಲ್ಲಿ ವ್ಯಾಸಂಗ ಮಾಡಿದ 326 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಮಂಗಳೂರು ವಿಶ್ವವಿದ್ಯಾಲಯದ 52, ರಾಜೀವ್ ಗಾಂಧಿ ವಿವಿಯ 8 ಮಂದಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎ.ಎಚ್ ರಾಜಸಾಬ್ ಮಾತನಾಡಿ, ಕೌಶಲ, ಜ್ಞಾನದೊಂದಿಗೆ ನೈತಿಕತೆಯಿದ್ದರೆ ಶಿಕ್ಷಣವು ಅದ್ಭುತವಾಗುತ್ತದೆ. ವಿದ್ಯಾರ್ಥಿಗಳು ಪದವಿ ಹಂತದಲ್ಲೇ ಸಂಶೋಧನೆಯಲ್ಲಿ ತೊಡಗಿಕೊಳ್ಳಬೇಕು. ಸಂಶೋಧನೆ ಎನ್ನುವುದು ಆಕಸ್ಮಿಕವಲ್ಲ. ಅದರ ಹಿಂದೆ ಸಾಕಷ್ಟು ಪರಿಶ್ರಮ, ಚಿಂತನೆಯಿರಬೇಕಾಗುತ್ತದೆ. ದೇಶದ ಆರ್ಥಿಕ ಶಕ್ತಿಗೆ ಹೋಲಿಸಿದರೆ ಶಿಕ್ಷಣವನ್ನು ಪಡೆಯುವವರ ಸಂಖ್ಯೆ ಕಡಿಮೆಯಿದೆ. ಇತರ ದೇಶಗಳಲ್ಲಿ ಆರ್ಥಿಕ ಶಕ್ತಿಗೆ ಅನುಗುಣವಾಗಿ ಶಿಕ್ಷಣ ಕ್ಷೇತ್ರವು ಬೆಳೆಯುತ್ತಿದೆ ಎಂದು ಅಭಿಪ್ರಾಯಿಸಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಂಗಳೂರು ವಿಶ್ವವಿದ್ಯಾಲಯ, ರಾಜೀವ್ ಗಾಂಧಿ ವಿಶ್ವವಿದ್ಯಾಲಯ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ರಂಗದಲ್ಲಿ ದಾಖಲೆಯೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ವಿಶಿಷ್ಠ ಸಾಧನೆ ಮಾಡುತ್ತಿದ್ದಾರೆ. ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಗೆ ಸೇರಲು 15 ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿದ್ದು, ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸಿದರೆ ಜನರು ಯಾವ ರೀತಿ ಸ್ಪಂದಿಸುತ್ತಾರೆ ಎನ್ನುವುದಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿಗಳಾದ ಜಯಶ್ರೀ ಅಮರನಾಥ ಶೆಟ್ಟಿ, ವಿವೇಕ್ ಆಳ್ವ ಹಾಗೂ ಆಳ್ವಾಸ್ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು. ಆಯುರ್ವೇದ ಕಾಲೇಜಿನ ಡಾ.ರೀಷ್ಮಾ ಶೆಟ್ಟಿ, ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಅಬ್ರಾರ ತಮ್ಮ ವಿದ್ಯಾರ್ಥಿ ಜೀವನದ ಬಗ್ಗೆ ಅನುಭವ ಹಂಚಿಕೊಂಡರು. ಆರ್ಥಾ ಪೆರ್ಲ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News