‘ಕಪ್ಪತಗುಡ್ಡ’ ಮೀಸಲು ಅರಣ್ಯ ಪ್ರದೇಶ: ಶೀಘ್ರವೇ ಅಧಿಸೂಚನೆ ಪ್ರಕಟ
ಬೆಂಗಳೂರು, ಎ.11: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಒಳಪಟ್ಟಿದ್ದ "ಕಪ್ಪತಗುಡ್ಡ" ಪ್ರದೇಶವನ್ನು ಮೀಸಲು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಿಸಿ ರಾಜ್ಯ ಸರಕಾರವು ಶೀಘ್ರವೇ ಅಧಿಸೂಚನೆ ಹೊರಡಿಸಲು ನಿರ್ಧರಿಸಿದೆ.
ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ಕಪ್ಪತಗುಡ್ಡಕ್ಕೆ ಸಂಬಂಧಿಸಿದಂತೆ ಅಂತಿಮ ನಿರ್ಣಯ ಕೈಗೊಳ್ಳುವ ಅಧಿಕಾರವನ್ನು ಮುಖ್ಯಮಂತ್ರಿಯ ವಿವೇಚನೆಗೆ ಬಿಡಲಾಗಿತ್ತು. ಇದೀಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಕಪ್ಪತಗುಡ್ಡ ಪ್ರದೇಶವನ್ನು ಸಂರಕ್ಷಿತ ಮೀಸಲು ಅರಣ್ಯ ಎಂದು ತೀರ್ಮಾನಿಸಿ ಕಡತಕ್ಕೆ ಸಹಿ ಹಾಕಿದ್ದು, ಆ ಕಡತವನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ರಮಾನಾಥ ರೈಗೆ ತಲುಪಿಸಿದ್ದಾರೆ. ಅರಣ್ಯ ಸಚಿವಾಲಯದಿಂದಲೂ ಕಡತಕ್ಕೆ ಹಸಿರು ನಿಶಾನೆ ಸಿಕ್ಕಿರುವುದರಿಂದ ರಾಜ್ಯ ಸರಕಾರವು ಒಂದೆರಡು ದಿನಗಳಲ್ಲಿ ಕಪ್ಪತಗುಡ್ಡ ಸಂರಕ್ಷಿತ ಮೀಸಲು ಅರಣ್ಯ ಪ್ರದೇಶ ಎಂದು ಘೋಷಿಸಿ ಅಧಿಸೂಚನೆ ಹೊರಡಿಸಲಿದೆ.
ಉತ್ತರ ಕರ್ನಾಟಕ ಭಾಗದಲ್ಲಿರುವ ಈ ಕಪ್ಪತಗುಡ್ಡ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಗಣಿಗಾರಿಕೆಗೆ ಅವಕಾಶ ನೀಡಬಾರದು. ಅದನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಸರಕಾರ ಘೋಷಿಸಬೇಕು ಎಂದು ಆಗ್ರಹಿಸಿ ಸತತವಾಗಿ ಹೋರಾಟ ನಡೆಯುತ್ತಿದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಗೊಂಡಿರುವ ತೀರ್ಮಾನದಿಂದ ಪರಿಸರ ಪ್ರೇಮಿಗಳ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.
ಕಪ್ಪತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಿಸಲು ನಾನು ಸಮ್ಮತಿ ನೀಡಿದ್ದೇನೆ. ವನ್ಯಜೀವಿ ಮಂಡಳಿಯ ಮುಂದಿನ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿ, ಅಂತಿಮ ತೀರ್ಮಾನ ಹೊರಬೀಳಲಿದೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ
ಜನರ ಆತಂಕ ನಿವಾರಣೆ: ಎಚ್.ಕೆ.ಪಾಟೀಲ್
ಕಪ್ಪತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಿಸಬೇಕೆಂಬ ಹೋರಾಟಕ್ಕೆ ಜಯ ಸಿಕ್ಕಿದ್ದು, ಇದರಿಂದ ಉತ್ತರ ಕರ್ನಾಟಕ ಭಾಗದ ಜನರಲ್ಲಿದ್ದ ಆತಂಕ ನಿವಾರಣೆಯಾಗಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂಂದಿಗೆ ಮಾತನಾಡಿದ ಅವರು, ಕೆಲಸದ ಒತ್ತಡದ ನಡುವೆಯೂ ಸೂಕ್ತ ತೀರ್ಮಾನ ಕೈಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ರಮಾನಾಥ ರೈಯವರಿಗೆ ಉತ್ತರ ಕರ್ನಾಟಕ ಭಾಗದ ಜನರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಕಪ್ಪತಗುಡ್ಡವನ್ನು ಸಂರಕ್ಷಿತ ಅರಣ್ಯಪ್ರದೇಶವೆಂದು ಘೋಷಿಸಬೇಕೆಂದು ಉತ್ತರ ಕರ್ನಾಟಕ ಭಾಗದ ಅನೇಕ ಮಠಾಧೀಶರು, ಪರಿಸರವಾದಿಗಳು ಹಾಗೂ ಜನತೆ ಆಗ್ರಹಿಸಿದ್ದರು. ಜನರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂಬಂಧ ಇಂದು ಸಂಜೆ ಕಡತಕ್ಕೆ ಸಹಿ ಹಾಕಿದ್ದಾರೆ. ಹಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಕಪ್ಪತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆ ಮಾಡುವುದು ವಿಳಂಬವಾಗಿತ್ತು. ಆದರೆ, ಅಂತಿಮವಾಗಿ ಸರಕಾರ ಜನರ ಪರವಾಗಿ ನಿರ್ಧಾರ ಕೈಗೊಂಡಿದೆ ಎಂದು ಎಚ್.ಕೆ. ಪಾಟೀಲ್ ಮೆಚ್ಚುಗೆ ವ್ಯಕ್ತಪಡಿಸಿದರು.