ರೈತರಿಗೆ ಬಿತ್ತನೆ ಬೀಜ ವಿತರಣೆ ಯೋಜನೆ ಸಮರ್ಪಕವಾಗಲಿ: ಡಾ.ರಾಜೇಂದ್ರ ಕುಮಾರ್
ಮಂಗಳೂರು, ಎ.12: ರಾಜ್ಯದ ರೈತರಿಗೆ ಬಿತ್ತನೆ ಬೀಜ ವಿತರಣೆ ಯೋಜನೆಯನ್ನು ಸಹಕಾರ ಸಂಘಗಳ ಮೂಲಕ ವಿತರಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಮಾಹಿತಿ ಕಾರ್ಯಾಗಾರ ಎ.11ರಂದು ಎಸ್‌ಸಿಡಿಸಿಸಿ ಬ್ಯಾಂಕ್‌ನ ಸಭಾಂಗಣದಲ್ಲಿ ನಡೆಯಿತು.
ಎಸ್‌ಸಿಡಿಸಿಸಿ ಬ್ಯಾಂಕ್, ಸಹಕಾರ ಇಲಾಖೆ ಹಾಗೂ ಕೃಷಿ ಇಲಾಖೆಗಳ ಜಂಟಿ ಆಶ್ರಯದಲ್ಲಿ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಉಡುಪಿ, ದ.ಕ. ಉಭಯ ಜಿಲ್ಲೆಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಸಿಇಒಗಳು ಭಾಗವಹಿಸಿದರು.
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ರಾಜ್ಯ ಸರಕಾರದ ಈ ಯೋಜನೆ ರೈತರಿಗೆ ಬಹು ಉಪಯುಕ್ತವಾಗಿದ್ದು, ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಆರಂಭಗೊಳ್ಳುವ ಮೊದಲೇ ಬಿತ್ತನೆ ಬೀಜ ವಿತರಣೆಯ ಬಗ್ಗೆ ಚಿಂತನೆ ನಡೆಸಿರುವುದು ಆಶಾದಾಯಕ ಎಂದರು.
ಈಗಾಗಲೇ ಕೆಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಬಿತ್ತನೆ ಬೀಜ ವಿತರಣೆ ಕಾರ್ಯ ನಡೆಯುತ್ತಿದ್ದು, ಯೋಜನೆ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕಾದರೆ ಸಹಕಾರ ಇಲಾಖೆ ಮತ್ತು ಕೃಷಿ ಇಲಾಖೆಗಳು ಸಮರ್ಪಕವಾಗಿ ಕಾರ್ಯ ಯೋಜನೆ ರೂಪಿಸ ಬೇಕು. ಜೊತೆಗೆ ಭತ್ತದ ಬೆಳೆಗೆ ಹೆಚ್ಚು ಪ್ರೋತ್ಸಾಹ ನೀಡಬೇಕೆಂದು ಹೇಳಿದರು.
ದ.ಕ. ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಬಿ.ಕೆ.ಸಲೀಂ ಪ್ರಾಸ್ತಾವಿಕವಾಗಿ ಮಾತನಾಡಿ, ಈ ಯೋಜನೆ ಪ್ರಯೋಜನ ವನ್ನು ಎಲ್ಲ ಕೃಷಿ ಪತ್ತಿನ ಪ್ರಾಥಮಿಕ ಸಹಕಾರಿ ಸಂಘಗಳು ಪಡೆಯಬೇಕು ಎಂದರು.
ಕಾರ್ಯಾಗಾರದಲ್ಲಿ ಕೃಷಿ ಜಂಟಿ ನಿರ್ದೇಶಕ ಚಂದ್ರಶೇಖರ ನಾಯಕ್ ಹಾಗೂ ಕೃಷಿ ಅಧಿಕಾರಿ ವೀಣಾ ಯೋಜನೆಯ ಕುರಿತು ಮಾಹಿತಿ ವಿವರಿಸಿದರು.
ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ನಾಯಕ್, ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕ ರಾದ ವಿನಯ ಕುಮಾರ್ ಸೂರಿಂಜೆ, ಎಂ.ವಾದಿರಾಜ ಶೆಟ್ಟಿ, ಶಶಿಕುಮಾರ್ ರೈ, ಸದಾಶಿವ ಉಳ್ಳಾಲ, ಬ್ಯಾಂಕ್‌ನ ಸಿಇಒ ಸತೀಶ್ ಎಸ್., ಸಹಕಾರ ಸಂಘಗಳ ಸಹಾಯಕ ನಿಬಂಧಕ ಮಂಜುನಾಥ ಸಿಂಗ್, ತೋಟಗಾರಿಕಾ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.