×
Ad

ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ಉದ್ಘಾಟನೆ

Update: 2017-04-13 16:04 IST

ಮಂಗಳೂರು, ಎ.13: ಮಂಗಳೂರಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಂಗಳೂರು ವಕೀಲರ ಸಂಘದ ವತಿಯಿಂದ ಆರಂಭಗೊಂಡ ಮಂಗಳೂರು ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘವನ್ನು ಗುರುವಾರ ಮಂಗಳೂರಿನ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಎಸ್.ಬೀಳಗಿ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಸೌಹಾರ್ದತೆಯ ನೆಲೆಗಟ್ಟಿನಲ್ಲಿ ನಿಂತಿರುವ ಸಹಕಾರಿ ಬ್ಯಾಂಕ್ ಗಳು ಜನತೆಗೆ ಹತ್ತಿರವಾಗಿವೆ. ಹಲವು ಸಹಕಾರಿ ಸಂಘಗಳ ಮಧ್ಯೆ ಇದೀಗ ಮಂಗಳೂರು ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ಹುಟ್ಟು ಪಡೆದಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆ ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ರಾಜ್ಯದಲ್ಲಿಯೇ ಗಮನ ಸೆಳೆದಿದೆ. ವಕೀಲರ ಸಹಕಾರಿ ಸಂಘವೂ ಬಲಿಷ್ಠವಾಗಿ ಬೆಳೆಯಲಿ. ದೇಶದಲ್ಲಿ ಸುಮಾರು 6 ಲಕ್ಷ ಸಹಕಾರಿ ಸಂಘಗಳಿದ್ದು, ಕರ್ನಾಟಕದಲ್ಲಿ ಈ ಸಂಖ್ಯೆ 40 ಸಾವಿರವಿದೆ ಎಂದರು.

ಸಹಕಾರಿ ಸಂಘಗಳ ಉಪನಿಬಂಧಕ ಬಿ.ಕೆ.ಸಲೀಂ, ವಕೀಲರ ಸಂಘದ ಉಪಾಧ್ಯಕ್ಷೆ ಪುಷ್ಪಲತಾ, ಕಾರ್ಯದರ್ಶಿ ದಿನಕರ ಶೆಟ್ಟಿ, ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕ ಎಚ್.ರಾಘವೇಂದ್ರ ಉಪಸ್ಥಿತರಿದ್ದರು.
ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷೆ ಸುಮನಾ ಶರಣ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷ ಅನಿಲ್ ಕುಮಾರ್ ವಂದಿಸಿದರು. ಅರುಣಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News