×
Ad

ನೀರು ಪೂರೈಕೆ, ಬಿಲ್ ಪಾವತಿ ವಿಳಂಬವಾದಲ್ಲಿ ಶಿಸ್ತು ಕ್ರಮ: ಪ್ರಮೋದ್

Update: 2017-04-14 00:00 IST

ಉಡುಪಿ, ಎ.13: ಉಡುಪಿ ವಿಧಾನಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜು ಮತ್ತು ಅದರ ಬಿಲ್ ಪಾವತಿ ವಿಚಾರ ವನ್ನು ಗಂಭೀರವಾಗಿ ಪರಿಗಣಿಸಿದೆ. ಆ ಕುರಿತು ಲೋಪ ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

 ಉಡುಪಿ ತಾಪಂ ಸಭಾಂಗಣದಲ್ಲಿ ಗುರುವಾರ ನಡೆದ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಡಿಯುವ ನೀರಿನ ಸಮಸ್ಯೆಯ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ನೀರಿನ ಕೊರತೆ ಇರುವ ಗ್ರಾಪಂಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಟೆಂಡರ್‌ದಾರರಿಗೆ ಅವರ ಬಿಲ್‌ಗಳನ್ನು ಶೀಘ್ರದಲ್ಲಿ ಪಾವತಿಸಬೇಕು. ಪಿಡಿಒ, ಪಂಚಾಯತ್‌ರಾಜ್ ಇಲಾಖೆಯ ಜಂಟಿ ಇಂಜಿನಿಯರ್, ತಾಪಂ ಕಾರ್ಯ ನಿರ್ವಹಣಾಧಿಕಾರಿ ಹಾಗೂ ತಹಶೀಲ್ದಾರ್ ಪ್ರತಿಯೊಂದು ಹಂತದಲ್ಲಿ 24ಗಂಟೆಯೊಳಗೆ ನೀರಿನ ಬಿಲ್‌ಗೆ ಸಂಬಂಧಿಸಿದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ 4 ದಿನಗಳಲ್ಲಿ ಟೆಂಡರ್‌ದಾರರಿಗೆ ಬಿಲ್ ಪಾವತಿ ಮಾಡಬೇಕು ಎಂದರು.

ನೀರು ಪೂರೈಕೆದಾರರ ಬಿಲ್‌ಗಳನ್ನು ಶೀಘ್ರದಲ್ಲಿ ಪಾವತಿಸು ವುದರಿಂದ ಅವರು ಸಕಾಲದಲ್ಲಿ ನೀರು ಪೂರೈಸಲು ಸಾಧ್ಯವಾಗುತ್ತದೆ. ಬಿಲ್ ವಿಲೇವಾರಿ ಪ್ರಕ್ರಿಯೆ ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರಗಿಸಲಾಗುವುದು ಎಂದು ಅವರು ಹೇಳಿದರು. ಎಲ್ಲಾ ಗ್ರಾಪಂಗಳು ತಮ್ಮಲ್ಲಿ ನೀರಿನ ಸಮಸ್ಯೆ ಕಂಡು ಬರುವ ಮೊದಲೇ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ತಯಾರಾಗಿರಬೇಕು. ಸಾರ್ವಜನಿಕರ ದೂರಿಗೆ ಅಧಿಕಾರಿಗಳು ಕೂಡಲೇ ಸ್ಪಂದಿಸಿ, ನೀರು ಒದಗಿಸುವ ಕಾರ್ಯ ಮಾಡಬೇಕು ಎಂದು ಸಚಿವರು ಸೂಚಿಸಿದರು.

 ನದಿಗಳಿಂದ ಪಂಪ್ ಮೂಲಕ ನೀರು ತೆಗೆಯುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಅವರ ಪಂಪ್‌ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿ ಈವರೆಗೆ ಆರಂಭಿಸಲಾದ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ಗೆ ಸಚಿವರು ತಿಳಿಸಿದರು. ಈಗ ಶೋಷಿತ ಕುಟುಂಬಗಳು ನರೇಗಾದಲ್ಲಿ ಬಾವಿ ತೋಡಲು ಸರಕಾರ ಅವಕಾಶ ಕಲ್ಪಿಸಿದ್ದು, ಆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ಜಿಪಂ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಪಂ ಸದಸ್ಯ ಜನಾರ್ದನ ತೋನ್ಸೆ, ಕುಂದಾಪುರ ಉಪ ವಿಭಾಗಾಧಿಕಾರಿ ಶಿಲ್ಪಾನಾಗ್, ಪೌರಾಯುಕ್ತ ಮಂಜುನಾಥಯ್ಯ, ತಾಪಂ ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News