×
Ad

ಚಾಮರಾಜನಗರ: ಅಂಬೇಡ್ಕರ್ ಭಾವಚಿತ್ರ ಮೆರವಣಿಗೆಯ ಮಾರ್ಗ ಬದಲಾವಣೆಗೆ ಆಕ್ರೋಶ; ಸಚಿವರ ಕಾರಿಗೆ ಮುತ್ತಿಗೆ

Update: 2017-04-14 20:12 IST

ಚಾಮರಾಜನಗರ, ಎ.14: ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ನಡೆದ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆಯ ಮಾರ್ಗ ಬದಲಾವಣೆ ಮಾಡಿದ ಹಿನ್ನೆಲೆಯಲ್ಲಿ ನಗರದಲ್ಲಿ ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಜಿಲ್ಲಾ ಉಸ್ತುವಾರಿ ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ.

ಬಾಬಾ ಸಾಹೇಬ್ ಅಂಬೇಡ್ಕರ್‌ರ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ವನದ ಮುಂದೆ ಇರುವ ಅಂಬೇಡ್ಕರ್ ಪುತ್ತಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಮಾಲಾರ್ಪಣೆ ಮಾಡಿದರು. ಬಳಿಕ ನಗರದ ಪ್ರವಾಸಿ ಮಂದಿರದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿಟ್ಟು ಮೆರವಣಿಗೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯ ಆರ್. ಧೃವನಾರಾಯಣ್, ಸ್ಥಳೀಯ ಶಾಸಕ ಸಿ.ಪುಟ್ಟರಂಗಶೆಟ್ಟಿ, ಗುಂಡ್ಲುಪೇಟೆ ಕ್ಷೇತ್ರದ ನೂತನ ಶಾಸಕಿ ಎಂ.ಸಿ. ಮೋಹನಕುಮಾರಿ, ಪ್ರಭಾರ ನಗರಸಭಾಧ್ಯಕ್ಷ ರಾಚಪ್ಪ, ಜಿಪಂ ಅಧ್ಯಕ್ಷ ರಾಮಚಂದ್ರ ಮತ್ತಿತರರು ಉಪಸ್ಥಿತರಿದ್ದರು.

ಪ್ರತಿಭಟನೆ: ನಗರದ ಪ್ರಮುಖ ರಸ್ತೆಗಳಲ್ಲಿ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ಮಾಡಿಲ್ಲ ಎಂದು ಆರೋಪಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಮತ್ತು ಜಿಲ್ಲಾಧಿಕಾರಿಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ನಗರದ ಹೃದಯಭಾಗವಾಗಿರುವ ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಎಂದಿನಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಬೇಕಿತ್ತು, ಆದರೆ ಮೆರವಣಿಗೆಯ ಮಾರ್ಗವನ್ನು ಬದಲಾಯಿಸಿ ಬೈಪಾಸ್‌ನಲ್ಲಿ ಮೆರವಣಿಗೆ ನಡೆಸಿ ಅಂಬೇಡ್ಕರ್‌ರವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದರು.

ಕಾರ್ಯಕ್ರಮ ಮುಗಿಸಿ ಹೊರಬಂದ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮತ್ತು ಲೋಕಸಬಾ ಸದಸ್ಯರನ್ನು ಇದೇ ವಿಚಾರವಾಗಿ ತರಾಟೆಗೆ ತೆಗೆದುಕೊಂಡ ಕಾರ್ಯಕರ್ತರು, ಪ್ರತಿ ವರ್ಷ ಒಂದಲ್ಲಾ ಒಂದು ನೆಪ ಹೇಳಿ ಅಂಬೇಡ್ಕರ್ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ದೇಶದ ಸಂವಿಧಾನ ರಚಿಸಿದ ಮಹಾನ್ ಪುರುಷನ ಜಯಂತಿಯನ್ನು ಕಾಟಾಚಾರಕ್ಕೆ ಆಚರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಬೇಕಿತ್ತು, ಆದರೆ ಮೆರವಣಿಗೆಯ ಮಾರ್ಗ ಬದಲಾಯಿಸಿದ್ದರಿಂದ ದಲಿತ ಸಮುದಾಯಕ್ಕೆ ನೋವಾಗಿದೆ ಎಂದು ಹೇಳಿ ಸಚಿವರ ಕಾರಿಗೆ ಮುತ್ತಿಗೆ ಹಾಕಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News