ರಾಜ್ಯದಲ್ಲಿ ಅಡಳಿತ ವಿರೋಧಿ ಅಲೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2017-04-16 12:26 GMT

ಹೊಸದಿಲ್ಲಿ, ಎ.16: ಮುಂಬರುವ 2018ರ ರಾಜ್ಯ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದು, ರಾಜ್ಯದಲ್ಲಿ ಯಾವುದೇ ಆಡಳಿತ ವಿರೋಧಿ ಅಲೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದ್ದಾರೆ.

ರವಿವಾರ ಹೊಸದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳ ಉಪ ಚುನಾವಣೆಯ ಗೆಲುವು ಕಾಂಗ್ರೆಸ್ ಪಕ್ಷದಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ. ಚುನಾವಣೆಗೆ ಈಗಿನಿಂದಲೇ ತಯಾರಿ ಮಾಡಿಕೊಳ್ಳಲಾಗುತ್ತಿದೆ. 2018ರ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಆ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆಯನ್ನು ಈಗಿನಿಂದಲೇ ಆರಂಭಿಸಲಾಗುವುದು ಎಂದ ಅವರು, ಕರ್ನಾಟಕದಲ್ಲಿ ಕೋಮುವಾದಿ ಬಿಜೆಪಿ ಆಡಳಿತಕ್ಕೆ ಬರಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ನುಡಿದರು.

ಜೆಡಿಎಸ್‌ನ ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆ ಸಂಬಂಧ ಪಕ್ಷದ ವರಿಷ್ಠರ ಜತೆ ಸಮಾಲೋಚನೆ ನಡೆಸಬೇಕಿದೆ. ಅವರ ಸೇರ್ಪಡೆ ಸಾಧಕ- ಬಾಧಕಗಳನ್ನು ಪರಾಮರ್ಶಿಸಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಬಿಜೆಪಿ ವಿರುದ್ದ ವಾಗ್ದಾಳಿ: ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಆವರಿಸಿದೆ. ಹೀಗಾಗಿ ರಾಜ್ಯದಲ್ಲಿನ ರೈತರ 52 ಸಾವಿರ ಕೋಟಿ ರೂ.ಸಾಲಮನ್ನಾಕ್ಕೆ ಆರ್ಥಿಕ ನೆರವು ನೀಡಲು ಪ್ರಧಾನಿ ಮೋದಿ ಅವರನ್ನು ಸರ್ವಪಕ್ಷ ನಿಯೋಗ ಮನವಿ ಮಾಡಿತ್ತು. ಆದರೆ, ಈ ವೇಳೆ ರಾಜ್ಯದ ಬಿಜೆಪಿ ಮುಖಂಡರು ಮೋದಿ ಬಳಿ ತುಟಿ ಬಿಚ್ಚಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಜ್ಯ ಸರಕಾರ ಸಹಕಾರ ಸಂಘಗಳ ಮೂಲಕ 10 ಸಾವಿರ ಕೋಟಿ ರೂ.ರೈತರಿಗೆ ಸಾಲ ನೀಡಿದೆ. ಉಳಿದ 42 ಸಾವಿರ ಕೋಟಿ ರೂ. ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ರೈತರಿಗೆ ಸಾಲ ನೀಡಿದೆ. ಹೀಗಾಗಿ ಕೇಂದ್ರ ಸರಕಾರ ರಾಜ್ಯದ ನೆರವಿಗೆ ಧಾವಿಸಿದರೆ ಸಾಲಮನ್ನಾದ ಲಾಭ ಎಲ್ಲರಿಗೂ ಸಿಗಲಿದೆ ಎಂದು ಅವರು ಹೇಳಿದರು.

ಗಣತಿ ವರದಿ ಶೀಘ್ರ ಬಿಡುಗಡೆ
‘ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವಕಾಂಕ್ಷೆಯ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷಾ ವರದಿಯನ್ನು ಶೀಘ್ರವೇ ಬಿಡುಗಡೆಗೊಳಿಸಲು ರಾಜ್ಯ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ’
-ಸಿದ್ದರಾಮಯ್ಯ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News