×
Ad

ಖುರೇಷಿ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರ ಕರ್ತವ್ಯ ಲೋಪ: ಕುಮಾರಸ್ವಾಮಿ

Update: 2017-04-17 11:12 IST

ಮಂಗಳೂರು, ಎ.17: ಮಂಗಳೂರಿನಲ್ಲಿ ಅಹ್ಮದ್ ಖುರೇಷಿ ಎಂಬ ಯುವಕನ ಮೇಲೆ ನಡೆದಿದೆ ಎನ್ನಲಾದ ಪೊಲೀಸ್ ದೌರ್ಜನ್ಯ ಪ್ರಕರಣದ ಕುರಿತಂತೆ ಸರಕಾರ ಮತ್ತು ಸಂತ್ರಸ್ತರ ಕಡೆಯಿಂದ ಮಾಹಿತಿ ಪಡೆದಿದ್ದೇನೆ. ಈ ಪ್ರಕರಣದಲ್ಲಿ ಕೆಲವು ಪೊಲೀಸ್ ಅಧಿಕಾರಿಗಳಿಂದ ಕರ್ತವ್ಯ ಲೋಪ ಆಗಿರುವುದನ್ನು ಗಮನಿಸಿದ್ದೇನೆ. ಈ ಬಗ್ಗೆ ಸದನದಲ್ಲಿ ಪ್ರಸ್ತಾವ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖುರೇಷಿಯನ್ನು ಮಾ.21ರಂದು ಬಂಧಿಸಿದ್ದರೂ ನ್ಯಾಯಾಲಯಕ್ಕೆ ಹಾಜರುಪಡಿಸದೆ ಮಾ.27ವರೆಗೆ ವಿಚಾರಣೆ ನಡೆಸಿರುವುದು ಸಂಶಯಕ್ಕೆ ಕಾರಣವಾಗಿದೆ. ಕೆಳಮಟ್ಟದ ಅಧಿಕಾರಿಗಳ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಿಯಂತ್ರಣ ಇಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದರು.

ಬಂಧನ ವೇಳೆ ಕಿಡ್ನಿ ಸಮಸ್ಯೆ ಬಗ್ಗೆ ಖುರೇಷಿ ಮಾಹಿತಿ ನೀಡಿದ್ದರೂ ದೌರ್ಜನ್ಯ ಎಸಗಲಾಗಿದೆ. ಕಾನೂನಿನ ಹೆಸರಿನಲ್ಲಿ ವ್ಯವಸ್ಥಿತ ದೌರ್ಜನ್ಯ ನಡೆಯುತ್ತಿದ್ದು, ಇದಕ್ಕೆ ಯಾರು ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

* ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರಕಾರ ವಿಫಲ: ಕುಮಾರಸ್ವಾಮಿ
  ರಾಜ್ಯದಲ್ಲಿ ತೀವ್ರ ಬರಗಾಲವಿದೆ. ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರ ದಯನೀಯ ವೈಫಲ್ಯ ಕಂಡಿದೆ. ದಿಲ್ಲಿ ನಾಯಕರನ್ನು ಭೇಟಿ ಮಾಡುವ ಆಸಕ್ತಿ ರಾಜ್ಯದ ಸಮಸ್ಯೆ ಬಗೆಹರಿಸುವಲ್ಲಿ ಮುಖ್ಯಮಂತ್ರಿ, ಸಚಿವರು ತೋರಿಸುತ್ತಿಲ್ಲ ಎಂದವರು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಕ್, ಮಾಜಿ ಸಚಿವ ಅಮರನಾಥ ಶೆಟ್ಟಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುಹಮ್ಮದ್ ಕುಂಞಿ ವಿಟ್ಲ, ಅಝೀಝ್ ಪರ್ತಿಪ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News