ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೆಚ್ಚುತ್ತಿರುವ ಧರ್ಮದ ಹಸ್ತಕ್ಷೇಪ: ಸಾಹಿತಿ ಚಂದ್ರಶೇಖರ ಪಾಟೀಲ್
ದಾವಣಗೆರೆ,ಎ.17: ಜಾತ್ಯತೀತವಾದ ಮೂಲವಾಗಿಟ್ಟುಕೊಂಡಿರುವ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಧರ್ಮದ ಹಸ್ತಕ್ಷೇಪ ಹೆಚ್ಚುತ್ತಿದೆ ಎಂದು ಸಾಹಿತಿ ಡಾ. ಚಂದ್ರಶೇಖರ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದರು.
ಸೋಮವಾರ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಪ. ಜಾತಿ ಮತ್ತು ಪ. ಪಂಗಡ ಅಭಿವೃದ್ಧಿ ಘಟಕದ ವತಿಯಿಂದ ಆಯೋಜಿಸಲಾಗಿದ್ದ ’ಬಾಬಾ ಸಾಹೇಬ್ ಅಂಬೇಡ್ಕರ್ ಅವರ 126ನೆ ಜಯಂತಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜಕೀಯದಲ್ಲಿ ಧರ್ಮದ ಹಸ್ತಕ್ಷೇಪ ಹೆಚ್ಚುತ್ತಿದೆ. ಇತ್ತೀಚೆಗೆ ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ ನಿದರ್ಶನವೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಅಂಬೇಡ್ಕರ್ ಅವರು ಜಾತ್ಯತೀತ ವಾದದಲ್ಲಿ ನಂಬಿಕೆ ಹೊಂದಿದ್ದವರು, ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವಲ್ಲಿ ಮಠಾಧಿಪತಿಗಳ ನಿರ್ಧಾರವೇ ಅಂತಿಮ ಎನ್ನುವಂತಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಧಾರವಾಡ ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕ ಡಾ. ಆರ್.ಕೆ. ದುರ್ಗದಾಸ್ ಮಾತನಾಡಿ, ಮಹನೀಯರ ಜಯಂತಿ ಆಚರಿಸುವ ಉದ್ದೇಶ ಅವರ ವಿಚಾರ ಜೀವನದಲ್ಲಿ ಅಳವಡಿಸಿಕೊಳ್ಳುವುದಾಗಿದೆ.ಎಲ್ಲರೂ ಬ್ರಿಟೀಷರ ವಿರುದ್ಧ ಸ್ವಾತಂತ್ರ್ಯಕ್ಕೆ ಹೋರಾಡಿದರೆ, ಅಂಬೇಡ್ಕರ್‌ರವರು ಮೇಲ್ಜಾತಿಯವರಿಂದ ತುಳಿತಕ್ಕೊಳಗಾದ ಜನರ ಸ್ವಾತಂತ್ರ್ಯಕ್ಕೆ ಹೋರಾಡಿದರು.
ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಬಿ ಕಲಿವಾಳ ಮಾತನಾಡಿ, ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಒಂದು ಗ್ರಂಥವೆಂದು ಪರಿಗಣಿಸಬೇಕು. ವಿದೇಶದ ವಿಶ್ವವಿದ್ಯಾನಿಲಯದಲ್ಲಿ ಅರ್ಥಶಾಸ್ತ್ರ ವಿಷಯಕ್ಕೆ ಸಂಬಂಧಿಸಿದಂತೆ ಅಧ್ಯಯನ ಮಾಡಿ ಪಿ.ಹೆಚ್‌ಡಿ ಪದವಿ ಪಡೆದ ಮೊದಲ ಭಾರತೀಯರಾಗಿದ್ದಾರೆ. ಅದರ ನೆನಪಿಗಾಗಿ ಬೆಂಗಳೂರಿನಲ್ಲಿ ಅಂಬೇಡ್ಕರ್ ಸ್ಕೂಲ್ ಆಪ್ ಎಕನಾಮಿಕ್ಸ್ ಸ್ಥಾಪನೆ ಮಾಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಎಸ್.ವಿ. ಹಲಸೆ, ಪರೀಕ್ಷಾಂಗ ಕುಲಸಚಿವರಾದ ಪ್ರೊ. ಗಂಗಾನ್‌ಕಾ, ಪ. ಜಾತಿ ಮತ್ತು ಪ. ಪಂಗಡ ಅಭಿವೃದ್ಧಿ ಘಟಕದ ಸಂಯೋಜಕ ಪ್ರೊ. ಲಕ್ಷ್ಮಣ ಹಾಜರಿದ್ದರು.