ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ: ಎಚ್.ಡಿ.ದೇವೇಗೌಡ

Update: 2017-04-18 08:07 GMT

ಮೈಸೂರು, ಎ.18:  ಈ ಹಿಂದೆ ಜೆಡಿಎಸ್ ಎರಡೂ ರಾಷ್ಟ್ರೀಯ ಪಕ್ಷಗಳ ಸಹವಾಸ ಮಾಡಿದ್ದರಿಂದ ಸಾಕಷ್ಟು ಪೆಟ್ಟು ತಿಂದಿದ್ದೇವೆ.

ಮುಂದೆ ಆ ರೀತಿ ತಪ್ಪು ಮಾಡುವುದಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

 ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಾದೇಶಿಕ ಪಕ್ಷದ ಅಗತ್ಯವಿದೆ ಎಂಬುದು ಜನರಿಗೆ ಮನವರಿಕೆಯಾಗಿದೆ. ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಇಪ್ಪತ್ತು ತಿಂಗಳ ಅವಧಿಯ ಜನಪರ ಆಡಳಿತ ಕಂಡಿರುವ ರಾಜ್ಯದ ಜನರು ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿಸುವ ವಿಶ್ವಾಸವಿದೆ ಎಂದರು.

ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ.
ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರಾಜ್ಯ ಸರ್ಕಾರ ಇತ್ತ ಗಮನ ಹರಿಸಿರಲಿಲ್ಲ. ಆದರೆ ಈಗ ಪರಿಸ್ಥಿತಿ ನಿಭಾಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದು ದೇವೇಗೌಡ ಹರಿಹಾಯ್ದರು.    

ನಂಜನಗೂಡು, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಕಾಂಗ್ರೆಸ್ ನೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಎಚ್.ಡಿ ದೇವೇಗೌಡ, ಯಡಿಯೂರಪ್ಪರಿಂದ ರಾಜಕೀಯ ಕಲಿಯುವ ಅಗತ್ಯ ನನಗಿಲ್ಲ. ಕೇವಲ ಹತ್ತು ತಿಂಗಳ ಅವಧಿಗೋಸ್ಕರ ಹತ್ತಾರು ಕೋಟಿ ರೂಪಾಯಿ ಖರ್ಚು ಮಾಡಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಅಗತ್ಯವಿರಲಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳ ಅಬ್ಬರದ ನಡುವೆ ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡುವ ಶಕ್ತಿ ನಮಗಿರಲಿಲ್ಲ ಎಂದರು.                        

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯನ್ನು ಸೋಲಿಸಲು ಬಿಹಾರ ಮಾದರಿಯಲ್ಲಿ ಕಾಂಗ್ರೆಸ್ ಜೆಡಿಎಸ್ ಮಹಾಘಟಬಂಧನ್ ರಚನೆ ಮಾಡಿಕೊಳ್ಳಲಿವೆ ಎಂಬ ವರದಿಗಳನ್ನು ತಳ್ಳಿಹಾಕಿದ ದೇವೇಗೌಡ, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಥವಾ ಬಿಜೆಪಿ ಜೊತೆ ಚುನಾವಣಾ ಹೊಂದಾಣಿಕೆ  ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.                        

ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿದ ಬಳಿಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಆದರೆ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಂಡ ನಂತರ ಯಾವುದೇ ಕಾರಣಕ್ಕೂ ಬದಲಾವಣೆ ಮಾಡುವುದಿಲ್ಲ. ಒಂದು ವಾರದ ಬಳಿಕ ಚುನಾವಣಾ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆಂದು ದೇವೇಗೌಡ ಹೇಳಿದರು.                     

ಕಾಂಗ್ರೆಸ್ ನ ಮಾಜಿ ಸಂಸದ ಎಚ್. ವಿಶ್ವನಾಥ್ ಜೆಡಿಎಸ್ ಸೇರುತ್ತಾರೆ ಎಂಬ ವದಂತಿ ಕುರಿತಂತೆ ಮಾತನಾಡಿದ ದೇವೇಗೌಡ, ನಾನು, ವಿಶ್ವನಾಥ್ ಈ ವಿಚಾರದಲ್ಲಿ ಯಾವುದೇ ಮಾತುಕತೆ ನಡೆಸಿಲ್ಲ. ಅಂತಹ ಸಂದರ್ಭಗಳು ನಿರ್ಮಾಣವಾಗಿಲ್ಲ. ವಿಶ್ವನಾಥ್ ಈ ಭಾಗದ ಶಕ್ತಿಯುತ ನಾಯಕರು. ಅವರಾಗಲಿ, ನಾವಾಗಲಿ ಪಕ್ಷ ಸೇರ್ಪಡೆ ಬಗ್ಗೆ ಪ್ರಸ್ತಾಪ, ಚರ್ಚೆ ಮಾಡಿಲ್ಲ. ಎಲ್ಲವೂ ಹೀಗೆ ಸುದ್ದಿಯಾಗುತ್ತಿದೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News