×
Ad

ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಿ: ಪದ್ಮಾವತಿ

Update: 2017-04-18 23:12 IST

 ಬೆಂಗಳೂರು, ಎ.18: ಡಿಸೆಂಬರ್ ಅಂತ್ಯಕ್ಕೆ ಬಿಬಿಎಂಪಿ ವ್ಯಾಪ್ತಿಯ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಪಾಲಿಕೆ ಮೇಯರ್ ಜಿ.ಪದ್ಮಾವತಿ ಮಂಗಲವಾರ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ತಾಕೀತು ಮಾಡಿದ್ದಾರೆ.

ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶ್ರೀರಾಂಪುರ, ಪ್ರಕಾಶನಗರ, ಶಿವನಗರ ವಾರ್ಡ್‌ಗಳಲ್ಲಿ ನಗರೋತ್ಥಾನ ಯೋಜನೆಯಡಿ 24.54 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರು ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಪರಿಶೀಲನೆ ಕಾರ್ಯ ನಡೆಸುತ್ತಿದ್ದೇನೆ ಎಂದು ಮಾಹಿತಿ ನೀಡಿದರು.

2015-16ನೆ ಸಾಲಿನ ನಗರೋತ್ಥಾನ ಯೋಜನೆಯಡಿ ರಾಜಾಜಿನಗರದಲ್ಲಿ ಪಾದಚಾರಿ ಮಾರ್ಗ, ರಸ್ತೆ ನಿರ್ಮಾಣ, ಒಳಚರಂಡಿ ವ್ಯವಸ್ಥೆ, ಹೂಳೆತ್ತುವುದು ಸೇರಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಆದರೆ, ಇದುವರೆಗೂ ಯಾವುದೇ ಕಾಮಗಾರಿ ಪೂರ್ಣಗೊಂಡಿಲ್ಲ. ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ನಿರ್ದಾಕ್ಷಿಣ್ಯ ಕ್ರಮ: ಸಕಾಲಕ್ಕೆ ಕಾಮಗಾರಿ ಪೂರ್ಣಗೊಳ್ಳದಿದ್ದರೆ ಆಯಾ ಪ್ರದೇಶದ ಇಂಜಿನಿಯರ್,ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಅದೇ ರೀತಿ, ಗುತ್ತಿಗೆದಾರರು ಕಳಪೆ ಕಾಮಗಾರಿ ನಡೆಸಿದರೆ ಅವರಿಗೆ ಭಾರೀ ಪ್ರಮಾಣದ ದಂಡ ವಿಧಿಸಲಾಗುವುದೆಂದು ಮೇಯರ್ ಜಿ.ಪದ್ಮಾವತಿ ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News