ಆರೋಗ್ಯ ಇಲಾಖೆಯಲ್ಲಿನ ಖಾಲಿ ಹುದ್ದೆ ಭರ್ತಿಗೆ ನಿರ್ಧಾರ: ಟಿ.ಬಿ.ಜಯಚಂದ್ರ

Update: 2017-04-19 17:17 GMT

ಬೆಂಗಳೂರು, ಎ.19: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ತಜ್ಞ ವೈದ್ಯರು, ವೈದ್ಯಾಧಿಕಾರಿಗಳು, ಶುಶ್ರೂಷಕರ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇದಕ್ಕಾಗಿ ವಿಶೇಷ ನೇಮಕಾತಿ ನಿಯಮಗಳನ್ನು ರಚಿಸಲು ನಿರ್ಧರಿಸಿದೆ. ಇದರ ಜೊತೆಗೆ ಆಯುಷ್ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೂ ಸಮ್ಮತಿ ನೀಡಲಾಗಿದೆ ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3,435 ತಜ್ಞ ವೈದ್ಯರ ಹುದ್ದೆಗಳು ಮಂಜೂರಾಗಿದ್ದು, 1,285 ಹುದ್ದೆಗಳು ಖಾಲಿಯಿವೆ. 2,586 ವೈದ್ಯಾಧಿಕಾರಿಗಳ ಪೈಕಿ 684 ಹುದ್ದೆಗಳು ಖಾಲಿಯಿವೆ. 31,070 ಅರೆ ವೈದ್ಯಾಧಿಕಾರಿಗಳ ಪೈಕಿ 8,130 ಹುದ್ದೆಗಳು ಖಾಲಿಯಿವೆ. 8,683 ಶುಶ್ರೂಷಕರ ಪೈಕಿ 1,753 ಹುದ್ದೆಗಳು ಖಾಲಿಯಿವೆ ಎಂದು ಅವರು ತಿಳಿಸಿದರು.

ಆಯುಷ್ ಇಲಾಖೆಯಲ್ಲಿ 866 ವೈದ್ಯರ ಹುದ್ದೆಗಳು ಮಂಜೂರಾಗಿದ್ದು, 170 ಹುದ್ದೆಗಳು ಖಾಲಿಯಿವೆ. ಈ ಎಲ್ಲ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ವಿಶೇಷ ನೇಮಕಾತಿ ನಿಯಮಗಳನ್ನು ರೂಪಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಅವರು ಹೇಳಿದರು.

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಕೊಕಟನೂರು ಗ್ರಾಮದ ಸಮೀಪ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಕೈಗೊಂಡಿರುವ ಪಶುವೈದ್ಯಕೀಯ ಮಹಾವಿದ್ಯಾಲಯದ ಕಟ್ಟ ನಿರ್ಮಾಣ ಕಾಮಗಾರಿಯ 27.31 ಕೋಟಿ ರೂ.ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಲಾಗಿದೆ ಎಂದು ಜಯಚಂದ್ರ ತಿಳಿಸಿದರು

ಬೆಳಗಾವಿಯ ಪುಣೆ-ಬೆಂಗಳೂರು ರಸ್ತೆಯಲ್ಲಿ ಮೇಲು ಸೇತುವೆ ಮತ್ತು ಕೂಡು ರಸ್ತೆಯ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜು 24.05 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಕಲಬುರ್ಗಿ ವಿಮಾನ ನಿಲ್ದಾಣದ ಬಾಕಿ ಉಳಿದ ಕಾಮಗಾರಿಯ ಪ್ಯಾಕೇಜ್-2ನ್ನು ಗುತ್ತಿಗೆದಾರ ಪ್ರೇಮಚಂದ್ರ ರೆಡ್ಡಿ(ಎನ್‌ಸಿಸಿ ಲಿಮಿಟೆಡ್)ಗೆ 29.20 ಕೊಟಿ ರೂ.ಗಳಿಗೆ ವಹಿಸಲು ನಿರ್ಧರಿಸಲಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಹಾಗೂ 128 ಗ್ರಾಮಗಳ ಡಿಬಿಓಟಿ ಆಧಾರಿತ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆಯ 166.43 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದ ಸರ್ವೆ ನಂ.141ರಲ್ಲಿನ 10 ಎಕರೆ ಗೋಮಾಳ ಜಮೀನನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಹತ್ತಿ ಮಾರುಕಟ್ಟೆ ಮಳಿಗೆ ಸ್ಥಾಪನೆ ಮಾಡಲು ಮಂಜೂರು ಮಾಡಲು ತೀರ್ಮಾನಿಸಲಾಗಿದೆ ಎಂದು ಜಯಚಂದ್ರ ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ ಅಮರಾವತಿ ಗ್ರಾಮದ ಸರ್ವೆ ನಂಬರ್ 47ರಲ್ಲಿ 57 ಎಕರೆ ಸರಕಾರಿ ಗೋಮಾಳ ಜಮೀನನ್ನು ಉನ್ನತ ಶಿಕ್ಷಣ ಇಲಾಖೆಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ಥಾಪನೆಗಾಗಿ ಉಚಿತವಾಗಿ ಮಂಜೂರು ಮಾಡಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಮಂಡ್ಲಿ, ಮಿಳ್ಳಘಟ್ಟ, ಕಾಶಿಪುರ ಮತ್ತು ಗೋಪಾಳ ಗ್ರಾಮಗಳ ವಿವಿಧ ಸರ್ವೆ ನಂಬರ್‌ಗಳಲ್ಲಿನ ಒಟ್ಟು 16.08 ಎಕರೆ ಸರಕಾರಿ ಖರಾಬು ಜಮೀನುಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಿ, ಕೊಳಚೆ ಪ್ರದೇಶಗಳ ನಿವಾಸಿಗಳಿಗೆ 94 ಸಿಸಿ ಅಡಿಯಲ್ಲಿ ಹಕ್ಕುಪತ್ರ ನೀಡಲು ತೀರ್ಮಾನಿಸಲಾಗಿದೆ ಎಂದು ಜಯಚಂದ್ರ ಹೇಳಿದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಲು ಉದ್ದೇಶಿಸಿದ್ದ ಬೆಂಗಳೂರಿನ ಬಸವೇಶ್ವರ ವೃತ್ತದಿಂದ ಲೀ ಮೆರಿಡಿಯನ್ ಹೊಟೇಲ್ ಹಾಗೂ ಮೇಖ್ರಿ ವೃತ್ತದ ಮುಖಾಂತರ ಹೆಬ್ಬಾಳದ ಮೇಲೆ ಸೇತುವೆ ಸಂಪರ್ಕಿಸುವ ಆರು ಪಥದ ಮೇಲ್ಮಟ್ಟದ ರಸ್ತೆ ನಿರ್ಮಾಣ ಯೋಜನೆಯನ್ನು ಕೈ ಬಿಡಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.

 ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ಗೆ ತುಮಕೂರು ತಾಲೂಕಿನ ಊರ್ಡಿಗೆರೆ ಹೋಬಳಿಯ ಮಂಚಕಲ್ ಕುಪ್ಪೆ ಗ್ರಾಮದ ಸರ್ವೆ ನಂಬರ್ 46/1 ರಿಂದ 46/11 ಮತ್ತು ಇತರೆಗಳಲ್ಲಿ ಸೇರಿರುವ ಒಟ್ಟು 32 ಎಕರೆ 16 ಗುಮಟೆ ವಿಸ್ತೀರ್ಣದ ಪ್ರದೇಶದಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ಏಕ ನಿವೇಶನ ವಿನ್ಯಾಸದ ಶುಲ್ಕ(1.51 ಕೋಟಿ ರೂ.)ಕ್ಕೆ ಸಂಪೂರ್ಣ ವಿನಾಯಿತಿ ನೀಡಲು ತೀರ್ಮಾನಿಸಲಾಗಿದೆ ಎಂದು ಜಯಚಂದ್ರ ಹೇಳಿದರು.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಮತಕ್ಷೇತ್ರದಲ್ಲಿ ಬರುವ 10 ಗ್ರಾಮಗಳ 19 ಕೆರೆಗಳಿಗೆ ಕೃಷ್ಣಾ ನದಿಯಿಂದ ನೀರನ್ನೆತ್ತಿ ತುಂಬಿಸುವ 34.38 ಕೊಟಿ ರೂ.ಮೊತ್ತದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಜಯಚಂದ್ರ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News