ಎ.22: ಉಳ್ಳಾಲ ಬನಾತ್ ಕಾಲೇಜು ಕಟ್ಟಡಕ್ಕೆ ಶಂಕುಸ್ಥಾಪನೆ: ರಾಜ್ಯಪಾಲರಿಂದ ಉದ್ಘಾಟನೆ
ಮಂಗಳೂರು, ಎ.20: ಉಳ್ಳಾಲದ ಶೈಕ್ಷಣಿಕ ರಂಗದ ಬೆಳವಣಿಗೆಗೆ ಪೂರಕವಾದ ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್‌ನ ಅಧೀನದಲ್ಲಿ ಬನಾತ್ ಕಾಲೇಜು ಕಟ್ಟಡ ಸ್ಥಾಪನೆ, ‘ಹಝ್ರತ್ ಮದನಿ ಇಲ್ಮ್' ಸ್ಮರಣ ಸಂಚಿಕೆ ಬಿಡುಗಡೆ ಮತ್ತು ಮದನಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಎ.22ರಂದು ಸಂಜೆ 4:30ಕ್ಕೆ ಹಝ್ರತ್ ಶಾಲಾ ವಠಾರ ಮದನಿ ಗ್ರೌಂಡ್‌ನಲ್ಲಿ ನಡೆಯಲಿದೆ ಎಂದು ಉಳ್ಳಾಲ ದರ್ಗಾದ ಅಧ್ಯಕ್ಷ ಹಾಜಿ ಅಬ್ದುರ್ರಶೀದ್ ತಿಳಿಸಿದ್ದಾರೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಝ್ರತ್ ಸೈಯದ್ ಬನಾತ್ ಕಾಲೇಜು ಕಟ್ಟಡಕ್ಕೆ ರಾಜ್ಯಪಾಲ ವಜುಭಾಯಿ ರೂಢಾಬಾಯಿ ವಾಲಾ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಸೈಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ದುಆಶೀರ್ವಚನ ನೀಡಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಸಮಾರಂಭಕ್ಕೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್, ರಾಜ್ಯಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡಿಸ್, ರೆಹ್ಮಾನ್ ಖಾನ್, ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯ ಸರಕಾರದ ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಸಹಿತ ವಿವಿಧ ಕ್ಷೇತ್ರದ ಶಾಸಕರು, ವೈದ್ಯಕೀಯ ಶಿಕ್ಷಣ ಸಂಸ್ಥೆಯ ಕುಲಪತಿಗಳು, ಧಾರ್ಮಿಕ ಮತ್ತು ರಾಜಕೀಯ ಕ್ಷೇತ್ರದ ಮುಖಂಡರು, ಉದ್ಯಮಿಗಳು ಭಾಗವಹಿಸಲಿದ್ದಾರೆ.
ಶೈಕ್ಷಣಿಕ ರಂಗದಲ್ಲಿ ಹಿಂದುಳಿದಿದ್ದ ಉಳ್ಳಾಲ ಪ್ರದೇಶದಲ್ಲಿ ಶಿಕ್ಷಣ ಕೇಂದ್ರಗಳನ್ನು ತೆರೆದು ಶಿಕ್ಷಣಕ್ಕೆ ಹೆಚ್ಚು ಉತ್ತೇಜನ ನೀಡುವ ಉದ್ದೇಶದಿಂದ ಈ ಚಾರಿಟೇಬಲ್ ಟ್ರಸ್ಟ್‌ನ್ನು 35 ವರ್ಷಗಳ ಹಿಂದೆ ಅಸ್ತಿತ್ವಕ್ಕೆ ತರಲಾಗಿದೆ. ಈಗಾಗಲೇ ಈ ಟ್ರಸ್ಟ್‌ನ ಅಧೀನದಲ್ಲಿ ಉರ್ದು, ಕನ್ನಡ, ಆಂಗ್ಲ ಮಾಧ್ಯಮ ಶಾಲೆಗಳು, ತಾಂತ್ರಿಕ ಶಿಕ್ಷಣ ಸಂಸ್ಥೆಗಳು, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜುಗಳು ಕಾರ್ಯಾಚರಿಸುತ್ತಿದ್ದು, ಸುಮಾರು 8 ಸಾವಿರ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಅಫ್ತರ್ ಹುಸೈನ್, ದರ್ಗಾ ಸಮಿತಿಯ ಉಪಾಧ್ಯಕ್ಷ ಬಾವ ಮುಹಮ್ಮದ್, ಅರೆಬಿಕ್ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಅಮೀರ್ ಹಾಜಿ ಉಪಸ್ಥಿತರಿದ್ದರು.