224 ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧೆ: ಬಸವರಾಜ ಹೊರಟ್ಟಿ

Update: 2017-04-20 18:13 GMT

ಬೆಂಗಳೂರು, ಎ.20: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ಗುರುವಾರ ನಗರದ ಜೆ.ಪಿ.ಭವನದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ಯಾವುದೇ ರೀತಿಯ ಹೊಂದಾಣಿಕೆಯನ್ನು ಮಾಡಿಕೊಂಡಿಲ್ಲ. ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಸಮಾನ ಅಂತರ ಕಾಯ್ದುಕೊಂಡು 224 ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಈಗಾಗಲೆ ಸುಮಾರು 100-105 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ದೇವೇಗೌಡರಿಗೆ ಹಸ್ತಾಂತರಿಸಲಾಗಿದೆ ಎಂದು ಅವರು ಹೇಳಿದರು. 

ನಾವು ನೀಡಿರುವ ಪಟ್ಟಿಯನ್ನು ದೇವೇಗೌಡರು ಪರಾಮರ್ಶಿಸಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಮೇ ಅಂತ್ಯ ಅಥವಾ ಜೂನ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಅವಧಿಗೆ ಮುಂಚಿತವಾಗಿ ಚುನಾವಣೆ ನಡೆಯುವ ಕುರಿತು ಇಂದಿನ ಸಭೆಯಲ್ಲಿ ಯಾವುದೆ ಚರ್ಚೆಯಾಗಿಲ್ಲ ಎಂದು ಹೊರಟ್ಟಿ ತಿಳಿಸಿದರು.

ವಿಧಾನಪರಿಷತ್ ಸದಸ್ಯ ರಮೇಶ್‌ಬಾಬು ಮಾತನಾಡಿ, ಪಕ್ಷದಲ್ಲಿನ 22 ವಿಭಾಗಗಳ ಪದಾಧಿಕಾರಿಗಳು ಹಾಗೂ ಪಕ್ಷದ ಸಂಪೂರ್ಣ ಸಮಿತಿಯನ್ನು ಪುನರ್ರಚನೆ ಮಾಡುವ ಅಧಿಕಾರವನ್ನು ದೇವೇಗೌಡ ಹಾಗೂ ಕುಮಾರಸ್ವಾಮಿಗೆ ನೀಡಲಾಗಿದೆ. ಇನ್ನು 15 ದಿನಗಳಲ್ಲಿ ಪೂರ್ಣಪ್ರಮಾಣದ ಸಮಿತಿ ರಚನೆಯಾಗಲಿದೆ ಎಂದರು.
ಬಸವರಾಜ ಹೊರಟ್ಟಿ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಇತ್ತೀಚೆಗೆ ದೇವೇಗೌಡರಿಗೆ ಬರೆದಿದ್ದ ಸುದೀರ್ಘ ಪತ್ರದಲ್ಲಿ ನೀಡಲಾಗಿದ್ದ ಸಲಹೆಗಳನ್ನು ಸಭೆಯಲ್ಲಿ ಅಂಗೀಕರಿಸಲಾಗಿದೆ. ಅಲ್ಲದೆ, ಪ್ರಚಾರ ಸಮಿತಿಯನ್ನು ರಚಿಸಿ ಕುಮಾರಸ್ವಾಮಿಯ 20 ತಿಂಗಳ ಅಧಿಕಾರವಧಿಯಲ್ಲಿ ಆಗಿರುವ ಸಾಧನೆ, ದೇವೇಗೌಡರು ರಾಜ್ಯದ ಮುಖ್ಯಮಂತ್ರಿ ಹಾಗೂ ದೇಶದ ಪ್ರಧಾನಿಯಾಗಿ ಮಾಡಿರುವ ಸಾಧನೆಗಳನ್ನು ಜನರಿಗೆ ತಲುಪಿಸಲು ಕಾರ್ಯತಂತ್ರ ರೂಪಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸಿ.ಬಿ.ಸುರೇಶ್‌ಬಾಬು ನೇತೃತ್ವದಲ್ಲಿ 224 ಕ್ಷೇತ್ರಗಳಲ್ಲಿ ಕೇಂದ್ರೀಕೃತ ಬೂತ್ ಕಮಿಟಿ ರಚನೆ ಮಾಡಲು ತೀರ್ಮಾನಿಸಲಾಗಿದೆ. ಅಲ್ಲದೆ, ಮುಂದಿನ ಮೂರು ತಿಂಗಳಲ್ಲಿ ಹಿಂದುಳಿದ ವರ್ಗಗಳ, ಪರಿಶಿಷ್ಟ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಮಾವೇಶಗಳನ್ನು ನಡೆಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಯಾವ ಸಂದರ್ಭದಲ್ಲಿ ಚುನಾವಣೆ ಘೋಷಣೆಯಾದರೂ ಅದನ್ನು ಎದುರಿಸಲು ಜೆಡಿಎಸ್ ಪಕ್ಷದ ಕಾರ್ಯಕರ್ತರು ಮಾನಸಿಕವಾಗಿ ಸಜ್ಜಾಗಿದ್ದಾರೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಸಲಾದ ಕುಮಾರಪಥ ಸಾಮಾಜಿಕ ಜಾಲತಾಣ ಸಂವಾದವನ್ನು ಜಿಲ್ಲಾ ಮಟ್ಟದಲ್ಲೂ ನಡೆಸಲು ನಿರ್ಧರಿಸಲಾಗಿದೆ ಎಂದು ರಮೇಶ್‌ಬಾಬು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News