×
Ad

ಜೆಡಿಎಸ್ ಜೊತೆ ಮೈತ್ರಿ ಇಲ್ಲ: ಸಿಎಂ

Update: 2017-04-22 19:08 IST

ಶಿವಮೊಗ್ಗ, ಎ. 22: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಪ್ರಸ್ತಾಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾಗಿ ಅಲ್ಲಗಳೆದಿದ್ದಾರೆ. 'ಯಾವುದೇ ಪಕ್ಷದೊಂದಿಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವುದಿಲ್ಲ. ಸ್ವತಂತ್ರವಾಗಿ ಚುನಾವಣೆ ಎದುರಿಸಲಿದೆ' ಎಂದು ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೋಮುವಾದಿ ಪಕ್ಷದ ವಿರುದ್ದ ರಾಷ್ಟ್ರ ಮಟ್ಟದಲ್ಲಿ ಜಾತ್ಯತೀತ ಪಕ್ಷಗಳ ಮಹಾಮೈತ್ರಿಯ ಕುರಿತಂತೆ ಪ್ರತಿಕ್ರಿಯಿಸಿದ್ದೆನೆ ಹೊರತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮೈತ್ರಿ ಮಾಡಿಕೊಳ್ಳಬೇಕೆಂಬ ಕುರಿತಂತೆ ಅಲ್ಲ. ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಮಹಾಮೈತ್ರಿಯ ಅಗತ್ಯವಿಲ್ಲ. ಇಲ್ಲಿ ಕೋಮುವಾದಿ ಪಕ್ಷಗಳು ಪ್ರಬಲವಾಗಿಲ್ಲ. ಕಾಂಗ್ರೆಸ್ ಶಕ್ತಿಯುತವಾಗಿದ್ದು, ಸ್ವತಂತ್ರವಾಗಿ ಚುನಾವಣೆ ಎದುರಿಸಲಿದೆ. ಮತ್ತೆ ರಾಜ್ಯದ ಅಧಿಕಾರ ಗದ್ದುಗೆಯೇರಲಿದೆ ಎಂದರು.

ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಯಾವುದೇ ಒಪ್ಪಂದ ಮಾಡಿಕೊಂಡಿರಲಿಲ್ಲ. ಇದು ಮೈತ್ರಿಯೂ ಅಲ್ಲ, ಹೊಂದಾಣಿಕೆಯಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ನಿರ್ಧರಿಸಲಿ: ಕೇಂದ್ರ ಸರ್ಕಾರ ಮೊದಲು ರಾಜ್ಯದ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ಸಾಲ ಮನ್ನಾ ಮಾಡಲಿ. ನಂತರ ರಾಜ್ಯ ಸರ್ಕಾರ ಸಹಕಾರಿ ಬ್ಯಾಂಕ್‌ಗಳಲ್ಲಿರುವ ಸಾಲ ಮನ್ನಾ ಮಾಡಲಿದೆ ಎಂದು ತಿಳಿಸಿದರು. ಮಂಡ್ಯದಲ್ಲಿ ಬಿಜೆಪಿ ಬಾವುಟ ಹಿಡಿದ ವ್ಯಕ್ತಿಯೋರ್ವ ಕಾರಿಗೆ ಅಡ್ಡ ಬಂದಿದ್ದ. ಈ ಸಂದರ್ಭದಲ್ಲಿ ಕಾರು ಡಿಕ್ಕಿಯಾಗಿ ಏನಾದರೂ ಅನಾಹುತ ಸಂಭವಿಸಿದ್ದರೆ ಹೊಣೆಗಾರರು ಯಾರಾಗುತ್ತಿದ್ದರು. ಈ ಹಿನ್ನೆಲೆಯಲ್ಲಿಯೇ ಅಲ್ಲಿನ ಎಸ್.ಪಿ.ಯನ್ನು ವಿಚಾರಿಸಿದ್ದು ನಿಜ. ಇದು ಒಂದು ದೊಡ್ಡ ವಿಷಯವೇ? ಎಂದು ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ.

ಶೀಘ್ರವೇ ಸಚಿವ ಸಂಪುಟ ವಿಸ್ತರಣೆ

'ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು' ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಹದೇವಪ್ರಸಾದ್ ನಿಧನ ಹಾಗೂ ಹೆಚ್.ವೈ.ಮೇಟಿ ರಾಜೀನಾಮೆಯಿಂದ ಖಾಲಿಯಿರುವ ಎರಡು ಸಚಿವ ಸ್ಥಾನಗಳಿಗೆ ಶೀಘ್ರದಲ್ಲಿಯೇ ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News