60 ಸಾವಿರ ರೈತರಿಗೆ 19 ಕೋಟಿ ರೂ. ಬೆಳೆ ಪರಿಹಾರ ಬಿಡುಗಡೆ: ಸಚಿವ ಕಾಗೋಡು ತಿಮ್ಮಪ್ಪ

Update: 2017-04-24 12:28 GMT

ಶಿವಮೊಗ್ಗ, ಎ.24: ಜಿಲ್ಲೆಯ 60 ಸಾವಿರ ರೈತರಿಗೆ 19.60 ಕೋಟಿ ರೂ. ಬೆಳೆ ಪರಿಹಾರ ಬಿಡುಗಡೆ ಮಾಡಲಾಗಿದ್ದು, ಈಗಾಗಲೇ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಮೊತ್ತ ಜಮಾ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕಂದಾಯ ಇಲಾಖೆ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇನ್ನೂ 15 ಸಾವಿರ ರೈತರಿಗೆ ಬೆಳೆ ಪರಿಹಾರ ವಿತರಣೆ ಬಾಕಿಯಿದೆ. ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಆಗದ ಕಾರಣದಿಂದ ಈ ರೈತರಿಗೆ ಪರಿಹಾರ ಮೊತ್ತ ಸಂದಾಯವಾಗಿಲ್ಲ. ಆಧಾರ್ ಲಿಂಕ್ ಮಾಡಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಈ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಅವರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಮೊತ್ತ ಜಮಾ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

2016-17ನೆ ಸಾಲಿನಲ್ಲಿ ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆಯಾಗದ ಕಾರಣದಿಂದ ಬರ ಪರಿಸ್ಥಿತಿ ಕಾಣಿಸಿಕೊಂಡಿದ್ದು, ಈಗಾಗಲೇ ಆರು ತಾಲೂಕುಗಳನ್ನು ಬರ ಪೀಡಿತವೆಂದು ಘೋಷಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಪ್ರತಿ ತಾಲೂಕಿಗೆ ಈಗಾಗಲೇ 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಇದೀಗ ಮತ್ತೆ 30 ಲಕ್ಷ ರೂ. ನೀಡಲಾಗಿದೆ. ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಎಚ್ಚರವಹಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅನಿವಾರ್ಯವಾದೆಡೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಲಾಗಿರುವ ಕೊಳವೆ ಬಾವಿಗಳಿಗೆ ಮುಂದಿನ ಒಂದು ತಿಂಗಳ ಅವಧಿಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಒಂದು ವೇಳೆ ಕಾಲಮಿತಿಯಲ್ಲಿ ಸಂಪರ್ಕ ಕಲ್ಪಿಸುವಲ್ಲಿ ವಿಫಲವಾದರೆ ಅಂತಹ ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಜರಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ದುಃಸ್ಥಿತಿಯಲ್ಲಿರುವ ಅಂಗನವಾಡಿ ಹಾಗೂ ಸರ್ಕಾರಿ ಶಾಲಾ ಕಟ್ಟಡಗಳ ದುರಸ್ತಿಗೆ ಗಮನಹರಿಸುವುದರ ಜೊತೆಗೆ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದರತ್ತ ಗಮನಹರಿಸಬೇಕು. ಈ ವಿಷಯದಲ್ಲಿ ವಿಳಂಬಕ್ಕೆ ಆಸ್ಪದವಾಗದಂತೆ ಎಚ್ಚರವಹಿಸಬೇಕು ಎಂದು ಹೇಳಿದರು.

ಮೊದಲು ಕೇಂದ್ರ ನಿರ್ಧಾರ ಪ್ರಕಟಿಸಲಿ

ರೈತರ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ನಿಲುವು ಸ್ಪಷ್ಟಪಡಿಸಿದ್ದು, ಕೇಂದ್ರ ಸರ್ಕಾರ ಮೊದಲು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಬೇಕು. ತದನಂತರ ರಾಜ್ಯ ಸರ್ಕಾರ ಕೂಡ ಸಹಕಾರಿ ಬ್ಯಾಂಕ್‌ಗಳಲ್ಲಿರುವ ಸಾಲ ಮನ್ನಾ ಮಾಡಲಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News