ಲೇಡಿಗೋಶನ್ ಆಸ್ಪತ್ರೆ ಕಟ್ಟಡ ಜೂನ್ ಅಂತ್ಯಕ್ಕೆ ಸಿದ್ಧ: ಸಂಸದ ನಳಿನ್

Update: 2017-04-24 18:50 GMT

ಮಂಗಳೂರು, ಎ.24: ಲೇಡಿಗೋಶನ್ ಸರಕಾರಿ ಆಸ್ಪತ್ರೆಯ ಹೊಸ ಕಟ್ಟಡದ ಕಾಮಗಾರಿ ಜೂನ್ ಅಂತ್ಯದೊಳಗೆ ಪೂರ್ಣಗೊಳ್ಳಲಿದ್ದು, ಜುಲೈಯಲ್ಲಿ ಸಾರ್ವಜನಿಕ ಸೇವೆಗೆ ಲಭಿಸಲಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲು ತಿಳಿಸಿದ್ದಾರೆ. ಇಂದು ಬೆಳಗ್ಗೆ ಆಸ್ಪತ್ರೆಗೆ ಭೇಟಿನೀಡಿ ಕಟ್ಟಡ ನಿರ್ಮಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಅವರು, 31 ಕೋ.ರೂ. ವೆಚ್ಚದಲ್ಲಿ ಲೇಡಿಗೋಶನ್ ಆಸ್ಪತ್ರೆಯ ಕಟ್ಟಡದ ಕಾಮಗಾರಿ ಆರಂಭಿಸಲಾಗಿದೆ. ಎಂಆರ್‌ಪಿಎಲ್ ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ 21 ಕೋ.ರೂ. ನೀಡಿದೆ. 10 ಕೋ.ರೂ. ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ಒದಗಿಸಲಾಗಿದೆ ಎಂದು ಅವರು ಹೇಳಿದರು.

 ಹಿಂದಿನ ಗುತ್ತಿಗೆದಾರರಿಂದ ಸಮಸ್ಯೆಯಾಗಿ ಕಟ್ಟಡ ಕಾಮಗಾರಿ ವಿಳಂಬವಾಯಿತು. ಇದೀಗ ಗುತ್ತಿಗೆದಾರರನ್ನು ಬದಲಾಯಿಸಲಾಗಿದ್ದು, ಕಾಮ ಗಾರಿ ತ್ವರಿತಗತಿಯಲ್ಲಿ ನಡೆದಿದೆ.

ಆರು ಮಹಡಿಗಳ ಕಟ್ಟಡದಲ್ಲಿ 600 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಅತ್ಯಾಧುನಿಕ ತೀವ್ರ ನಿಗಾ ಘಟಕದ ವ್ಯವಸ್ಥೆಯೂ ಈ ಕಟ್ಟಡದಲ್ಲಿ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಅವರು ಹೇಳಿದರು. ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕ ಎಚ್. ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಕೃಷ್ಣ ರಾವ್, ಲೇಡಿಗೋಶನ್ ಆಸ್ಪತ್ರೆಯ ಅಧೀಕ್ಷಕಿ ಡಾ. ಸವಿತಾ ಪರಿಶೀಲನೆ ಸಂದರ್ಭ ಮತ್ತಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News