ಅಜೆಕಾರು: ತ್ಯಾಜ್ಯ ವಿಲೇವಾರಿ ಘಟಕಕ್ಕೆ ಶಿಲಾನ್ಯಾಸ
ಹೆಬ್ರಿ, ಎ.25: ಮರ್ಣೆ ಗ್ರಾಪಂ ವ್ಯಾಪ್ತಿಯಲ್ಲಿ 12 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಶಾಸಕ ಸುನೀಲ್ ಕುಮಾರ್ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಅಭಿವೃದ್ಧಿ ಎನ್ನುವುದು ನಿಂತ ನೀರಾಗದೆ ಚಲನಶೀಲವಾಗಿರಬೇಕು. ಗ್ರಾಮೀಣ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾಳಜಿ ತೋರಿಸಬೇಕಿದೆ. ಕಾರ್ಕಳ ತಾಲ್ಲೂಕಿನಲ್ಲಿ ಶಾಶ್ವತ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ಕಿಂಡಿ ಅಣೆಕಟ್ಟುಗಳ ನಿರ್ಮಾಣ, ರಸ್ತೆಗಳ ಡಾಮರು ಹೀಗೆ ಹಲವು ಕಾಮಗಾರಿಗಳನ್ನು ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಮರ್ಣೆ ಗ್ರಾಪಂ ಅಧ್ಯಕ್ಷ ದಿನೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಜಿಪಂ ಸದಸ್ಯ ಉದಯ ಎಸ್. ಕೋಟ್ಯಾನ್, ಎಪಿಎಂಸಿ ಸದಸ್ಯ ರತ್ನಾಕರ್ ಅಮೀನ್, ಮರ್ಣೆ ಗ್ರಾಪಂ ಉಪಾಧ್ಯಕ್ಷೆ ಜ್ಯೋತಿ, ಉಪತಹಶೀಲ್ದಾರ್ ನಾಗಪ್ಪ, ಕಂದಾಯ ನಿರೀಕ್ಷಕ ಮಂಜುನಾಥ್ ನಾಯಕ್, ಗ್ರಾಮಕರಣಿಕ ರಿಯಾಝ್ ಮುಂತಾದವರು ಉಪಸ್ಥಿತರಿದ್ದರು.
ಪ್ರಶಾಂತ್ ಶೆಟ್ಟಿ ಸ್ವಾಗತಿಸಿ, ಗುರುಪ್ರಸಾದ್ ರಾವ್ ವಂದಿಸಿದರು. ಹರೀಶ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಘವೇಂದ್ರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.