ಪರಿಶಿಷ್ಟ ಜಾತಿ-ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗೆ ಸಿಎಂ ಸೂಚನೆ

Update: 2017-04-25 10:55 GMT

ಬೆಂಗಳೂರು, ಎ.25: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ನಿಯಂತ್ರಣ ಸಂಬಂಧ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನ್ಯಾಯಾಲಯಗಳ ಸ್ಥಾಪನೆ ಸಂಬಂಧ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿಯಾಗಿ ಮಾತುಕತೆ ನಡೆಸುವಂತೆ ಸಮಾಜ ಕಲ್ಯಾಣ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಖಾತೆ ಸಚಿವರಿಗೆ ಸೂಚಿಸಿದರು. 

ದೌರ್ಜನ್ಯ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು. ಇದಕ್ಕೆ ಪೂರಕವಾದ ಕ್ರಮಗಳನ್ನು ಪ್ರಾಸಿಕ್ಯುಷನ್, ಪೊಲೀಸರು ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕೈಗೊಳ್ಳಬೇಕು. ಎಲ್ಲ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು. 

ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ದೌರ್ಜನ್ಯ ಪ್ರಕರಣಗಳಲ್ಲಿ ಹಿನ್ನೆಡೆಯಾಗುತ್ತಿದ್ದು, ತಪ್ಪಿತಸ್ಥರು ಶಿಕ್ಷೆಯಿಂದ ಬಚಾವಾಗುತ್ತಿದ್ದಾರೆ. ಅದಕ್ಕೆ ಅವಕಾಶ ಕೊಡದೆ ಸಾಕ್ಷ್ಯಾಧಾರ ಮತ್ತು ಸಾಕ್ಷಿಗಳನ್ನು ಒದಗಿಸುವ ಕೆಲಸ ಆಗಬೇಕು. ವಜಾಗೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆ ಚುರುಕಾಗಬೇಕು. ಮೇಲ್ಮನವಿ ಸಲ್ಲಿಕೆಗೆ ಅರ್ಹವಾದ ಪ್ರಕರಣಗಳ ಕುರಿತು ಅಧಿಕಾರಿಗಳು ಆಗಿಂದಾಗ್ಗೆ ಪರಿಶೀಲನೆ ನಡೆಸಬೇಕು. ಅಪೀಲು ಸಲ್ಲಿಸಲು ಅವಕಾಶವಿದ್ದರೂ ಆ ರೀತಿ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು. 

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕೈಗೊಂಡಿರುವ ಕ್ರಮ ಕುರಿತು ಪರಿಶೀಲನೆ ನಡೆಸಿದ ಮುಖ್ಯಮಂತ್ರಿ, ಸುಳ್ಳು ಮಾಹಿತಿ ನೀಡಿ ಜಾತಿ ಪ್ರಮಾಣ ಪತ್ರ ಪಡೆದವರ ಜೊತೆಗೆ ಅವರಿಗೆ ಸಹಕರಿಸುವ ಅಧಿಕಾರಿಗಳನ್ನೂ ಶಿಕ್ಷೆಗೆ ಗುರಿಪಡಿಸಬೇಕು ಎಂದು ಸೂಚಿಸಿದರು. ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ನಡೆಸಬೇಕು. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರಿಗೂ ಸೂಚನೆ ನೀಡುವುದಾಗಿ ಹೇಳಿದರು. 

ಪರಿಶಿಷ್ಟ ಜಾತಿ ಮತ್ತು ಪಂಗಡಗಳವರಿಗೆ ಕ್ಷೌರ ಮಾಡಲು ಮತ್ತು ದೇಗುಲಗಳಿಗೆ ಪ್ರವೇಶ ನಿರಾಕರಿಸುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಆದರೂ ಆಗಾಗ ಮಾಧ್ಯಮಗಳಲ್ಲಿ ವರದಿಯಾಗುತ್ತಿರುತ್ತದೆ. ಈ ಕುರಿತೂ ಜಿಲ್ಲಾಧಿಕಾರಿಗಳು ಸಭೆ ನಡೆಸುವ ಮೂಲಕ ಗಮನ ಹರಿಸಬೇಕು ಎಂದರು. 

ಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ಸಮಾಜ ಕಲ್ಯಾಣ ಸಚಿವ ಆಂಜನೇಯ, ಸಣ್ಣ ಕೈಗಾರಿಕೆಗಳ ಸಚಿವ ರಮೇಶ್ ಜಾರಕಿಹೊಳಿ, ಪ್ರವಾಸೋಮದ್ಯ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕರಾದ ಗೋವಿಂದ ಕಾರಜೋಳ, ಚಿಕ್ಕಮಾದು, ಶಿವಮೂರ್ತಿ, ತುಕಾರಾಂ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಯಾ, ಸಮಾಜ ಕಲ್ಯಾಣ, ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News