ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ

Update: 2017-04-25 12:35 GMT

ಸಾಗರ, ಎ.25: ಶಿಕ್ಷಣ ಕ್ಷೇತ್ರ ಹಾಗೂ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಿ.ಗಣಪತಪ್ಪ, ರಾಜ್ಯದಲ್ಲಿ 6.50 ಲಕ್ಷದಷ್ಟು ಸರಕಾರಿ ನೌಕರರು ಇದ್ದು, ಅದರ ಪೈಕಿ ಶೇ. 50ರಷ್ಟು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿದ್ದಾರೆ. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ತಕ್ಷಣ ಸ್ಪಂದಿಸಬೇಕು. 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ತಕ್ಷಣ ಅನುಷ್ಟಾನಕ್ಕೆ ತರುವ ನಿಟ್ಟಿನಲ್ಲಿ ಸರಕಾರ ಚಿಂತನೆ ನಡೆಸಬೇಕು ಎಂದು ಒತ್ತಾಯಿಸಿದರು.

ಸರಕಾರ ಎನ್‌ಪಿಎಸ್ ರದ್ದು ಮಾಡಿ ಹೊಸ ಪಿಂಚಣಿ ನೀತಿಯನ್ನು ಜಾರಿಗೆ ತರಲು ಹೊರಟಿರುವ ಕ್ರಮ ಅವೈಜ್ಞಾನಿಕವಾಗಿದೆ. ಹಳೆ ಪಿಂಚಣಿ ಯೋಜನೆಯನ್ನು ರದ್ದು ಮಾಡಿ, ಶಿಕ್ಷಕರಿಗೆ ಭದ್ರತೆಯ ಹೆಸರಿನಲ್ಲಿ ಶೇ. 10ರಷ್ಟು ಹಣವನ್ನು ಕಡಿತ ಮಾಡುತ್ತಿರುವುದು ಸರಿಯಲ್ಲ. ಅದರ ಬದಲು ಹಳೆಯ ಪಿಂಚಣಿ ಯೋಜನೆಯನ್ನೆ ಮುಂದುವರೆಸಿ, ನಿವೃತ್ತಿ ನಂತರ ಶಿಕ್ಷಕ ಸಮೂಹ ನೆಮ್ಮದಿಯಾಗಿ ಬದುಕು ನಡೆಸಲು ಸರಕಾರ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷೆ ಜ್ಯೋತಿ ರೀನಾ ಅಂದ್ರಾದೆ ಮಾತನಾಡಿ, ಶೈಕ್ಷಣಿಕ ಕ್ಷೇತ್ರ ಹಾಗೂ ಶಿಕ್ಷಕರ ಸಮಸ್ಯೆ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಶಿಕ್ಷಕರು ಬೀದಿಗಳಿದು ಹೋರಾಟ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಸರಕಾರ ಪ್ರಾಥಮಿಕ ಶಿಕ್ಷಣದ ಅಭಿವೃದ್ಧಿಗಾಗಿ ಪ್ರಾಥಮಿಕ ಶಿಕ್ಷಣ ಮಂಡಳಿ ಸ್ಥಾಪಿಸಬೇಕು. ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಶಿಕ್ಷಕ ಮತ್ತು ವಿದ್ಯಾರ್ಥಿಗಳ ನಡುವಿನ ಅನುಪಾತ ಕಡಿಮೆ ಮಾಡಿ, ಶಾಲೆಗಳಲ್ಲಿ ಕೊರತೆ ಇರುವ ಶಿಕ್ಷಕರನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಮನು ಡಿ., ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಟಿ.ಸ್ವಾಮಿ, ಶಿಕ್ಷಕರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಒ.ಕೆ.ಶಿವಪ್ಪ, ಪ್ರಮುಖರಾದ ಹಾಲಸ್ವಾಮಿ, ಬೂದ್ಯಪ್ಪ, ಬಿಳಕೇರಿ, ಮೂರ್ತಿ ಎಂ.ವೈ., ರಮೇಶ್ ನಾರಾಯಣ, ನಾಗರಾಜ ಇನ್ನಿತರರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News