ಜಿಲ್ಲಾಧಿಕಾರಿ ಕಚೇರಿಯಲ್ಲೇ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ
Update: 2017-04-26 20:36 IST
ಕೋಲಾರ, ಎ.26: ಜಿಲ್ಲಾಧಿಕಾರಿ ಕಚೇರಿಯಲ್ಲೇ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೋಲಾರದಲ್ಲಿ ನಡೆದಿದೆ. ತಾಲೂಕಿನ ವೀರಾಪುರ ಗ್ರಾಮದ ರೈತ ಶ್ರೀರಾಮಪ್ಪ (60) ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಅವರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಜಮೀನು ವಿವಾದ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದ ಶ್ರೀರಾಮಪ್ಪ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಕೋಲಾರ ಜಿಲ್ಲಾಧಿಕಾರಿ ತ್ರಿಲೋಕಚಂದ್ರ, ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿ ಮದ್ಯಪಾನ ಮಾಡಿದ್ದ. ಯಾವುದಕ್ಕೂ ಸರಿಯಾಗಿ ಉತ್ತರಿಸಲಿಲ್ಲ. ಪತ್ರವೊಂದನ್ನು ಬರೆದು ತರಲು ಸೂಚಿಸಿ ಅವರನ್ನು ಕಳುಹಿಸಲಾಗಿತ್ತು. ಆದರೆ ಕೆಲವೇ ನಿಮಿಷಗಳಲ್ಲಿ ಆತ ವಿಷ ಸೇವಿಸಿರುವುದು ತಿಳಿದುಬಂತು ಎಂದಿದ್ದಾರೆ.