​ವಕ್ಫ್ ಆಸ್ತಿಗಳ ಸರ್ವೆ ಕಾರ್ಯ ಬಹುತೇಕ ಪೂರ್ಣ: ಝಫರುಲ್ಲಾ

Update: 2017-05-03 17:53 GMT

ಬೆಂಗಳೂರು, ಮೇ 2: ರಾಜ್ಯದಲ್ಲಿನ 12 ಸಾವಿರ ವಕ್ಫ್ ಆಸ್ತಿಗಳ ಪೈಕಿ 8 ಸಾವಿರ ಆಸ್ತಿಗಳ ಸರ್ವೆ ಕಾರ್ಯ ಪೂರ್ಣಗೊಂಡಿದ್ದು, ಉಳಿದ ಆಸ್ತಿಗಳ ಸರ್ವೆಯೂ ಆದಷ್ಟು ಶೀಘ್ರದಲ್ಲೆ ಪೂರ್ಣಗೊಳ್ಳಲಿದೆ ಎಂದು ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಝಫರುಲ್ಲಾ ತಿಳಿಸಿದ್ದಾರೆ.

ಬುಧವಾರ ನಗರದ ಕಬ್ಬನ್‌ಪೇಟೆ ಮುಖ್ಯರಸ್ತೆಯಲ್ಲಿರುವ ಹಝ್ರತ್ ಹಮೀದ್ ಶಾ ಕಾಂಪ್ಲೆಕ್ಸ್‌ನ ಉರ್ದು ಹಾಲ್‌ನಲ್ಲಿ ನಡೆದ ರಾಜ್ಯದ ಎಲ್ಲ ಜಿಲ್ಲೆಗಳ ವಕ್ಫ್ ಅಧಿಕಾರಿಗಳ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬೆಂಗಳೂರು ನಗರ, ಹಾವೇರಿ ಸೇರಿದಂತೆ ಇನ್ನಿತರ ಕೆಲ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿಗಳ ಸರ್ವೆ ಕಾರ್ಯಕ್ಕೆ ಸಮಸ್ಯೆಯಾಗಿದೆ. ಈ ಬಗ್ಗೆ ಚರ್ಚೆ ನಡೆಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್ ಮೇ 4ರಂದು ಮಧ್ಯಾಹ್ನ 3ಗಂಟೆಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಸರ್ವೆ ಇಲಾಖೆಯ ಆಯುಕ್ತರ ಸಭೆಯನ್ನು ಕರೆದಿದ್ದಾರೆ ಎಂದು ಅವರು ಹೇಳಿದರು.

2007ರಲ್ಲಿ ಕೊಡಗು ಜಿಲ್ಲೆಯಲ್ಲಿನ ವಕ್ಫ್ ಆಸ್ತಿಗಳ ಸರ್ವೆ ಕಾರ್ಯ ಪೂರ್ಣಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ರಾಹಿಂ ಅಡೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ವಕ್ಫ್ ಆಸ್ತಿಗಳ ಸರ್ವೆ ಕಾರ್ಯ ಶೇ.100ರಷ್ಟು ಪೂರ್ಣಗೊಳಿಸಲಾಗಿದೆ ಎಂದು ಝಫರುಲ್ಲಾ ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳ ಪೈಕಿ ಮೂರು ತಾಲೂಕುಗಳಲ್ಲಿನ ವಕ್ಫ್ ಆಸ್ತಿಗಳ ಸರ್ವೆ ಕಾರ್ಯ ಪೂರ್ಣಗೊಂಡಿದೆ. ಇನ್ನುಳಿದ ಮೂರು ತಾಲೂಕುಗಳಲ್ಲೂ ಕೆಲಸ ಪ್ರಗತಿಯಲ್ಲಿದೆ. ರಾಜ್ಯಾದ್ಯಂತ ಮುಸ್ಲಿಮ್ ಸಮುದಾಯಕ್ಕೆ ಸ್ಮಶಾನ(ಖಬರಸ್ತಾನ್)ಕ್ಕೆ ಸುಮಾರು 800 ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಜಿಲ್ಲಾ ವಕ್ಫ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಝಫರುಲ್ಲಾ ತಿಳಿಸಿದರು.

ಇಂದಿನ ಸಭೆಯಲ್ಲಿ ವಕ್ಫ್ ಆಸ್ತಿಗಳ ಸರ್ವೆ ಕುರಿತು ಪರಿಶೀಲನೆ, ವಕ್ಫ್ ಆಸ್ತಿಗಳ ದಾಖಲಾತಿಗಳನ್ನು ಸಂರಕ್ಷಿಸುವುದು, ಲೆಕ್ಕಪರಿಶೋಧನೆ, ವಕ್ಫ್ ಆಸ್ತಿಗಳ ಒತ್ತುವರಿಯನ್ನು ಗಮನಿಸಿ ಅದನ್ನು ತೆರವುಗೊಳಿಸುವುದು, ಬೈಲಾ, ವಕ್ಫ್ ಆಸ್ತಿಗಳ ನೋಂದಣಿ ಪ್ರಕ್ರಿಯೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ನಿರ್ದೇಶ ನಾಲಯದ ನಿರ್ದೇಶಕ ಅಕ್ರಮ್ ಪಾಷ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News