ಉಡುಪಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ಪ್ರಗತಿ ಪರಿಶೀಲನೆ

Update: 2017-05-04 15:04 GMT

ಉಡುಪಿ, ಮೇ 4: ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಪರಿಶೀಲನೆ ನಡೆಸಿದ ಮುಖ್ಯ ಕಾರ್ಯದರ್ಶಿಗಳು, ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ಟ್ಯಾಂಕರ್ ಮೂಲಕ ಸರಬರಾಜು ಮಾಡುತ್ತಿರುವ ನೀರಿನ ಪ್ರಮಾಣ ಮತ್ತು ಗುಣಮಟ್ಟವನ್ನು ಪರಿಶೀಲಿಸುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಅಮೃತ್ ಯೋಜನೆ ಮತ್ತು ಯುಜಿಡಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಅವರು ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಅಂಗನವಾಡಿ ಮತ್ತು ಹಾಸ್ಟೆಲ್‌ಗಳ ನಿರ್ಮಾಣಕ್ಕೆ ಅಗತ್ಯವಿರುವ ಜಾಗವನ್ನು ಗುರುತಿಸಿ ಕಾಮಗಾರಿ ಪ್ರಾರಂಭಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಡೆಂಗ್ ಮತ್ತು ಮಲೇರಿಯಾ ಪ್ರಕರಣಗಳು ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ತೆರೆದ ಕೊಳವೆ ಬಾವಿಗಳನ್ನು ಸಮರ್ಪಕ ರೀತಿಯಲ್ಲಿ ಮುಚ್ಚುವಂತೆ ಸೂಚನೆಗಳನ್ನು ನೀಡಿದರು.

ಜಿಲ್ಲೆಯಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಪ್ರಗತಿ ಪರಿಶೀಲಿಸಿದ ಮಹೇಶ್ವರ ರಾವ್, ಟಾಸ್ಕ್‌ಪೋರ್ಸ್‌ನಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಮುಗಿಸಿ ವರದಿ ನೀಡುವಂತೆ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುದೀಕರಣ ಸೌಲ್ಯಭ್ಯವನ್ನು ಶೀಘ್ರವೇ ನೀಡುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಹೊಸದಾಗಿ ಕೈಗೊಳ್ಳುವ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡುವಂತೆ ಹಾಗೂ ಕಾಮಗಾರಿಗಳ ಅನುಷ್ಠಾನದಲ್ಲಿ ತೊಂದರೆಯಿದ್ದಲ್ಲಿ ಹಾಗೂ ಅನುದಾನದ ಅವಶ್ಯಕತೆಯಿದ್ದಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ ಮತ್ತು ಕೈಗಾರಿಕಾ ಇಲಾಖೆಯಿಂದ ಹೊಸದಾಗಿ ಹಮ್ಮಿಕೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ವಿಸ್ತೃತ ವರದಿಯನ್ನು ಸಲ್ಲಿಸುವಂತೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಹಾಗೂ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News