ಮಕ್ಕಳಿಗೆ ಆರೋಗ್ಯಕರ ಪರಿಸರ ನಿರ್ಮಿಸಿ: ಟಿ.ವೆಂಕಟೇಶ್ ನಾಯ್ಕ

Update: 2017-05-04 15:11 GMT

ಉಡುಪಿ, ಮೇ 4: ಮಕ್ಕಳು ದೇಶದ ಭವಿಷ್ಯದ ಪ್ರಜೆಗಳು. ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಸಮಾಜದಲ್ಲಿ ಆರೋಗ್ಯಕರ ವಾತಾವರಣ ನಿರ್ಮಿಸುವುದು ಎಲ್ಲಾ ಸರಕಾರಗಳ ಹಾಗೂ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಟಿ.ವೆಂಕಟೇಶ ನಾಯ್ಕ ತಿಳಿಸಿದ್ದಾರೆ.

ಗುರುವಾರ ಮಣಿಪಾಲದಲ್ಲಿರುವ ಜಿಪಂ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಪಂ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ‘ಮಕ್ಕಳ ಹಕ್ಕುಗಳ ಸೂಕ್ಷ್ಮತೆ, ಕಡ್ಡಾಯ ಶಿಕ್ಷಣ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ, ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಮತ್ತು ಹಿರಿಯ ನಾಗರಿಕರಿಗೆ ಇಲಾಖಾ ಸವಲತ್ತುಗಳು’ ವಿಷಯಗಳ ಬಗ್ಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಆಯೋಜಿಸಲಾದ ಒಂದು ದಿನದ ತರಬೇತಿ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಪ್ರತಿಯೊಂದು ಮಗುವೂ ಈ ದೇಶದ ಆಸ್ತಿ. ಸಂವಿಧಾನದಲ್ಲಿ ಮಕ್ಕಳ ರಕ್ಷಣೆ, ಪೋಷಣೆಗಾಗಿಯೇ ಅಗತ್ಯ ಕಾನೂನುಗಳನ್ನು ರೂಪಿಸಲಾಗಿದೆ. ಇವುಗಳ ಪಾಲನೆಯಲ್ಲಿ ಯಾವುದೇ ನಿರ್ಲಕ್ಷ ತೋರದೆ, ಮಕ್ಕಳಿಗಾಗಿ ಸ್ವಸ್ಥ ಸಮಾಜ ನಿರ್ಮಾಣದ ಜವಾಬ್ದಾರಿ ನಿರ್ವಹಿಸುವುದು ಪೋಷಕರಿಗೆ ಮಾತ್ರವಲ್ಲದೇ ಎಲ್ಲಾ ಸರಕಾರಗಳಿಗೂ ಕಡ್ಡಾಯವಾಗಿದೆ ಎಂದರು.

ಬಡತನ ಮತ್ತು ಅರ್ಥಿಕ ಕಾರಣಗಳಿಂದ ಮಕ್ಕಳು ಬಾಲಕಾರ್ಮಿಕರಾಗುತ್ತಿದ್ದಾರೆ. 14 ವರ್ಷಗಳಿಗಿಂತ ಕೆಳಗಿನ ಮಕ್ಕಳನ್ನು ಕಾರ್ಮಿಕರನ್ನಾಗಿ ಬಳಸುವುದು ಅಪಾಯಕಾರಿ. ದೇಶದಲ್ಲಿ ಬಾಲ್ಯ ವಿವಾಹ ಪ್ರಮಾಣ ಸಹ ಅಧಿಕವಾಗಿದ್ದು, ಇತ್ತೀಚಿನ ವರದಿಯಂತೆ ದೇಶದ ಶೇ.45ರಷ್ಟು ಬಾಲಕಿಯರು ಮತ್ತು ಶೇ.18ರಷ್ಟು ಬಾಲಕರು ಬಾಲ್ಯ ವಿವಾಹಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ 1,333 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿವೆ. ಇವುಗಳನ್ನು ತಡೆಯುವ ಜವಾಬ್ದಾರಿಯನ್ನು ಪ್ರತಿ ಇಲಾಖೆಗೆ ನೀಡಲಾಗಿದೆ. ಎಲ್ಲ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ನ್ಯಾಯಾಧೀಶರು ಹೇಳಿದರು.

ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಲಭ್ಯವಿರುವ ಸೌಲಭ್ಯಗಳ ಕುರಿತು ಕರಪತ್ರ ಹಾಗೂ ಭಿತ್ತಿಪತ್ರಗಳನ್ನು ಟಿ.ವೆಂಕಟೇಶ್ ನಾಯ್ಕ ಬಿಡುಗಡೆ ಗೊಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ. ವನಿತಾ ಎನ್.ತೊರವಿ, ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ನಿಷೇಧದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೇ ಮಾದರಿಯಾಗಿದೆ. ಜಿಲ್ಲೆಯಲ್ಲಿ ಆಯೋಗದ ವತಿಯಿಂದ ಕೈಗೊಳ್ಳುವ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತದಿಂದ ಉತ್ತಮ ಬೆಂಬಲ ದೊರಕುತ್ತಿದೆ. ವಲಸೆ ಮಕ್ಕಳ ಮೇಲೆ ಹೆಚ್ಚಿನ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿದ್ದು, ಸಂಘ ಸಂಸ್ಥೆಗಳು ಹಾಗೂ ಪಾಲಕರು ಈ ಕುರಿತು ಗಮನಹರಿಸಬೇಕಿದೆ ಎಂದರು.

ಆಯೋಗ ಮತ್ತು ಕಾನೂನು ಸೇವಾ ಪ್ರಾಧಿಕಾರದ ಮೂಲಕ ರಾಜ್ಯಾದ್ಯಂತ ಮಕ್ಕಳ ಹಕ್ಕುಗಳ ರಕ್ಷಣೆ, ಬಾಲ್ಯ ವಿವಾಹ ಮತ್ತು ಬಾಲಕಾರ್ಮಿಕ ಪದ್ದತಿ ಕುರಿತು ಅರಿವು ಮೂಡಿಸಲು ಪ್ರಚಾರ ವಾಹನಗಳನ್ನು ಬಳಸುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಜೂನ್ 8ರಿಂದ 12ರವರೆಗೆ ಜಿಲ್ಲೆಯಾದ್ಯಂತ ಈ ಅರಿವು ಕಾರ್ಯಕ್ರಮ ನಡೆಯಲಿದೆ ಎಂದು ತೊರವಿ ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಬಿ.ಕೆ. ನಾರಾಯಣ ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ಸ್ವಾಗತಿಸಿದರು. ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಉಪ ನಿರ್ದೇಶಕ ನಿರಂಜನ ಭಟ್ ವಂದಿಸಿದರು. ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News