×
Ad

ಪಕ್ಷವಿರೋಧಿ ಚಟುವಟಿಕೆ ನಡೆಸಿದ್ದವರ ಮರುಸೇರ್ಪಡೆ: ಕಾಸರಗೋಡು ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ

Update: 2017-05-07 19:07 IST

ಕಾಸರಗೋಡು, ಮೇ 7: ಪಕ್ಷವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಪಕ್ಷದಿಂದ ವಜಾಗೊಂಡವರನ್ನು ಮತ್ತೆ ಪಕ್ಷಕ್ಕೆ ಸೇರ್ಪಡೆಗೊಳಿಸಿದ್ದನ್ನು ಪ್ರತಿಭಟಿಸಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಸೇರಿದಂತೆ ಹತ್ತಕ್ಕೂ ಅಧಿಕ ಮುಖಂಡರು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಕಳೆದ ಸ್ಥಳೀಯ ಸಂಸ್ಥೆ ಚುನಾವಣೆ ಸಂದರ್ಭ ಜಿಲ್ಲಾ ಪಂಚಾಯತ್ ಗೆ ಸ್ಪರ್ಧಿಸಲು ಟಿಕೆಟ್ ನೀಡಿಲ್ಲ ಎಂಬ ಕಾರಣಕ್ಕೆ ವರ್ಕಾಡಿ ಕ್ಷೇತ್ರದಿಂದ ಕಾಂಗ್ರೆಸ್   ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿದ್ದ ಮಂಜೇಶ್ವರ ಬ್ಲಾಕ್ ಪಂಚಾಯತ್ ಮಾಜಿ ಅಧ್ಯಕ್ಷ ಡಿ.ಎಂ.ಕೆ. ಮುಹಮ್ಮದ್ ರನ್ನು ಮತ್ತೆ ಪಕ್ಷಕ್ಕೆ ಸೇರ್ಪಡೆಗೊಳಿಸುವುದನ್ನು ಪ್ರತಿಭಟಿಸಿ ಕಾಂಗ್ರೆಸ್ ನಲ್ಲಿ ಅಸಮಾಧಾನದ ಅಲೆ ಎದ್ದಿದೆ.

ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವುದನ್ನು ಜಿಲ್ಲಾ ಕಾಂಗ್ರೆಸ್ ನ ಒಂದು ಬಣ ಪ್ರಬಲವಾಗಿ ವಿರೋಧಿಸುತ್ತಿದ್ದು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೇಶವ ಪ್ರಸಾದ್ ನಾಣಿತ್ತಿಲು, ಮಂಜೇಶ್ವರ ಬ್ಲಾಕ್ ಪಂಚಾಯತ್ ಉಪಾಧ್ಯಕ್ಷೆ  ಮಮತಾ ದಿವಾಕರ್, ಸುಂದರ ಆರಿಕ್ಕಾಡಿ, ಯುವ ಕಾಂಗ್ರೆಸ್ ಮಂಡಲ ಅಧ್ಯಕ್ಷ ನಾಸಿರ್ ಮೊಗ್ರಾಲ್,  ಜಿಲ್ಲಾ ಕಾರ್ಯದರ್ಶಿ ಸುಧಾಕರ ರೈ,  ಐಎನ್  ಟಿಯುಸಿ ಮಂಜೇಶ್ವರ ಬ್ಲಾಕ್ ಅಧ್ಯಕ್ಷ  ಸುನಿತ್ ಕುಮಾರ್,  ಲಕ್ಷ್ಮಣ ಪ್ರಭು ಮೊದಲಾದವರು ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆ ಪತ್ರವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಕೀಮ್  ಕುನ್ನಿಲ್  ಮತ್ತು ಕೆಪಿಸಿಸಿಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹರ್ಷಾದ್ ವರ್ಕಾಡಿಯವರ ರಾಜೀನಾಮೆಯಿಂದ ಕಾಸರಗೋಡು ಜಿಲ್ಲಾ ಪಂಚಾಯತ್ ನಲ್ಲಿ ಕಾಂಗ್ರೆಸ್ ನೇತೃತ್ವದ ಐಕ್ಯರಂಗ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದೆ. 17 ಸದಸ್ಯ ಬಲದಲ್ಲಿ ಕಾಂಗ್ರೆಸ್ ನೇತೃತ್ವದ ಐಕ್ಯರಂಗ ಎಂಟು ಸ್ಥಾನ ಹೊಂದಿದೆ. ಎಡರಂಗ ಏಳು ಮತ್ತು ಬಿಜೆಪಿ ಇಬ್ಬರು ಸದಸ್ಯರನ್ನು ಹೊಂದಿದ್ದು, ಹರ್ಷಾದ್ ವರ್ಕಾಡಿಯವರ ರಾಜೀನಾಮೆಯಿಂದ ಜಿಲ್ಲಾ ಪಂಚಾಯತ್ ನಲ್ಲಿ ಐಕ್ಯರಂಗ ಅಲ್ಪಮತಕ್ಕೆ ಕುಸಿದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News