ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ : ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ
ಬೆಂಗಳೂರು, ಮೇ 7: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ, ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ ಸೇರಿದಂತೆ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಸಿಎಂ, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಮುಖಂಡರೊಂದಿಗೆ ಸಮಾಲೋಚನೆ ನಡೆಸಲು ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಮೇ 8ರ ಮಧ್ಯಾಹ್ನ 3ಗಂಟೆಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪಕ್ಷದ ಮುಂಚೂಣಿ ಘಟಕಗಳ ಅಧ್ಯಕ್ಷರೊಂದಿಗೆ ವೇಣುಗೋಪಾಲ್, ಕಾರ್ಯದರ್ಶಿಗಳಾದ ಮಾಣಿಕಂ ಠಾಗೋರ್, ಪಿ.ಸಿ.ವಿಷ್ಣುನಾಥ್, ಮಧುಯಕ್ಷಿ ಗೌಡ್ ಹಾಗೂ ಡಾ.ಸಾಕೆ ಶೈಲಜಾ ನಾಥ್ ಅವರನ್ನೊಳಗೊಂಡ ತಂಡ ಚರ್ಚಿಸಲಿದೆ.
ಮೇ 9ರ ಬೆಳಗ್ಗೆ 11ರಿಂದ ಮಧ್ಯಾಹ್ನ 1.30ರ ವರೆಗೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಸಂಸದರು, ಮಧ್ಯಾಹ್ನ 3ಗಂಟೆಗೆ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ತಿಳಿಸಿದೆ.
ಮೇ 10ರ ಬೆಳಗ್ಗೆ 10.30ಕ್ಕೆ ಕೆಪಿಸಿಸಿ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲಿರುವ ವೇಣುಗೋಪಾಲ್ ನೇತೃತ್ವದ ತಂಡವು, ಅನಂತರ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ಗುಂಡೂರಾವ್ ಅವರೊಂದಿಗೆ ಚರ್ಚೆ ನಡೆಸಲಿದೆ.
ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಪಕ್ಷದಲ್ಲಿ ಹಿಡಿತ ಸಾಧಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಭಿಪ್ರಾಯವನ್ನು ವೇಣುಗೋಪಾಲ್ ನೇತೃತ್ವದ ತಂಡ ಪಡೆದುಕೊಳ್ಳಲಿದೆ. ಅಲ್ಲದೆ, ಕೆಪಿಸಿಸಿಗೆ ನೂತನ ಸಾರಥಿ ನೇಮಕ ಸಂಬಂಧವೂ ಎಲ್ಲ ಮುಖಂಡರ ಅಭಿಪ್ರಾಯವನ್ನು ಆಲಿಸಲಿದೆ ಎಂದು ಗೊತ್ತಾಗಿದೆ.
ಈ ಮಧ್ಯೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್, ಇಂಧನ ಸಚಿವ ಡಿ.ಕೆ. ಶಿವಕುಮಾರ್, ಸಂಸದ ಕೆ.ಎಚ್.ಮುನಿಯಪ್ಪ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿದೆ. ಹೀಗಾಗಿ ಯಾರನ್ನು ನೇಮಿಸಬೇಕು. ಯಾರ ನೇಮಕದಿಂದ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬ ಬಗ್ಗೆಯೂ ಚರ್ಚಿಸಲಿದ್ದಾರೆ.